ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಪ್ರತಿಭಟನೆ ನಡೆಸಲು ದೆಹಲಿಯ ಜಂತರ್ ಮಂತರ್ಗೆ ನುಗ್ಗಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ ರಾಂಕಾ ಅವರನ್ನು ಮಂಗಳವಾರ ಬೆಳಿಗ್ಗೆ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ಉಲ್ಲೇಖಿಸಿ ಜಂತರ್ ಮಂತರ್ನಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಗೆ ಪ್ರತಿಭಟನೆ ನಡೆಸಲು ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಅಲ್ಲದೆ, ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಜೆಪಿ ನಾಯಕರು ಅಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಜನತಾ ದಳ (ಯುನೈಟೆಡ್) ಪಕ್ಷದ ರಾಷ್ಟ್ರೀಯ ಕಚೇರಿ ಇರುವ ಕಡೆಯಿಂದ ಇತರ ಕಾರ್ಯಕರ್ತರ ಜೊತೆ ಜಂತರ್ ಮಂತರ್ ಆವರಣಕ್ಕೆ ನುಗ್ಗಿದ ಸಿಜೆಪಿ ನಾಯಕರು, ಅಲ್ಲಿನ ಬಿಗಿ ಪೊಲೀಸ್ ಭದ್ರತೆಯನ್ನು ದಾಟಿ ಒಳಪ್ರವೇಶಿಸಿದ್ದಾರೆ.
ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿರುವ ಅಭಿಜೀತ್ ದೀಪ್ಕೆ, “ಪ್ರತಿರೋಧವನ್ನು ಅಧಿಸೂಚನೆ ಹೊರಡಿಸಿ ನಿಷೇಧಿಸಲು ಸಾಧ್ಯವಿಲ್ಲ” ಎಂದು ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಜಂತರ್ ಮಂತರ್ ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟ ಸರ್ಕಾರ
ದೆಹಲಿಯಲ್ಲಿ ಪ್ರತಿಭಟನೆ ಮತ್ತು ಧರಣಿಗಳನ್ನು ನಡೆಸಲು ಗುರುತಿಸಲಾಗಿದ್ದ ಅಧಿಕೃತ ಸ್ಥಳಗಳ ಪಟ್ಟಿಯಿಂದ ಜಂತರ್ ಮಂತರ್ ಅನ್ನು ಕೈಬಿಡಲಾಗಿದೆ ಎಂದು ಸೋಮವಾರ ಹೊರಡಿಸಲಾದ ಅಧಿಕೃತ ಪ್ರಕಟಣೆ ತಿಳಿಸಿದೆ.
ಜಂತರ್ ಮಂತರ್ ಬದಲಿಗೆ ಪ್ರತಿಭಟನೆ ಮತ್ತು ಧರಣಿಗಳನ್ನು ನಡೆಸಲು ದೆಹಲಿಯಲ್ಲಿ ಮೂರು ಪರ್ಯಾಯ ಸ್ಥಳಗಳನ್ನು ಗುರುತಿಸಲಾಗಿದೆ. ರಾಮಲೀಲಾ ಮೈದಾನ, ಬುರಾರಿ ಮೈದಾನ ಮತ್ತು ಪೂರ್ವ ದೆಹಲಿಯ ಸಿಬಿಡಿ ಮೈದಾನಗಳು ಈ ಪಟ್ಟಿಯಲ್ಲಿವೆ.
ನಾಗರಿಕರು ತಮ್ಮ ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ಆಯೋಜಿಸುವ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ಪರ್ಯಾಯ ಸ್ಥಳಗಳನ್ನು ಗುರುತಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ