ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರಿನ ಬಿಜೆಪಿ ಮುಖಂಡ ಶಿವಕುಮಾರ (50) ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ (Range Rover) ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ-ದಾಬಸ್ಪೇಟೆ ರಿಂಗ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಗ್ಯಾಸ್ ಸಿಲಿಂಡರ್ ಲಾರಿಗೆ ಓವರ್ ಟೇಕ್ ಮಾಡುವಾಗ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನುಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಶಿವಕುಮಾರ ಅವರು ಮುಂಬರುವ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ.
ದೇವನಹಳ್ಳಿ ಪೊಲೀಸರು (Devanahalli Police) ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಬಗ್ಗೆ ತನಿಖೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ