ಖ್ಯಾತ ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ; ಬೈಕ್‌ನಲ್ಲಿ ಬಂದಿದ್ದ ಮೂವರು ಆರೋಪಿಗಳು ಪರಾರಿ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ವಾಹನದ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ನಟ ನಟ ಟೈಗರ್ ಶ್ರಾಫ್ ಅವರ ಕಾರಿನ ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೃಷ್ಟವಶಾತ್, ಟೈಗರ್ ಶ್ರಾಫ್ ಅವರಿಗೆ ಯಾವುದೇ ಗುಂಡೇಟಿನ ಗಾಯಗಳಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಪಶ್ಚಿಮ ಉಪನಗರದಲ್ಲಿರುವ ಜುಹು ಪೊಲೀಸ್ ಠಾಣೆ ವ್ಯಾಪ್ತಿಯ ಪುಷ್ಪಾ ಪಾರ್ಕ್ ಸಮೀಪ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ದಾಳಿಗೆ ಕಾರಣವೇನು ಮತ್ತು ಘಟನೆಗೆ ಸಂಬಂಧಿಸಿದಂತೆ ಯಾವೆಲ್ಲ ಬೆಳವಣಿಗೆಗಳು ನಡೆದಿವೆ ಎಂಬುದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂವರು ಅಪರಿಚಿತರು ಮೋಟಾರ್‌ ಸೈಕಲ್‌ನಲ್ಲಿ ಸ್ಥಳಕ್ಕೆ ಆಗಮಿಸಿ, ನಟ ಟೈಗರ್ ಶ್ರಾಫ್ ಹಾಗೂ ಅವರ ಸ್ನೇಹಿತನನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಟೈಗರ್ ಶ್ರಾಫ್ ಸುರಕ್ಷಿತ
ಟೈಗರ್ ಶ್ರಾಫ್ ಅವರು ಆಟವಾಡಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಅವರ ಕಾರಿನ ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಆಟೋರಿಕ್ಷಾ ಚಾಲಕರೊಬ್ಬರೂ ಸೇರಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದರೆ, ಗಾಯಗೊಂಡ ಮೂವರ ಗುರುತು ಹಾಗೂ ಅವರ ಗಾಯಗಳ ತೀವ್ರತೆಯ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.
“ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಅವರಿಗೆ ಯಾವುದೇ ಗಾಯಗಳಾಗಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆರೋಪಿಗಳಿಗಾಗಿ ಪೊಲೀಸರಿಂದ ತೀವ್ರ ಶೋಧ
ಗುಂಡಿನ ದಾಳಿ ನಡೆಸಿದವರನ್ನು ಪತ್ತೆಹಚ್ಚಲು ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳ ಸುಳಿವು ಪತ್ತೆಹಚ್ಚುವ ಉದ್ದೇಶದಿಂದ ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶೇಷ ಪೊಲೀಸ್ ತಂಡಗಳು ಪರಿಶೀಲಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕೋಲ್ಕತ್ತಾ ದುರ್ಗಾಪೂಜೆ ಮಂಟಪದಲ್ಲಿ ಕಾಲ್ತುಳಿತ : 17 ಮಂದಿ ಸಾವು; 35 ಜನರಿಗೆ ಗಾಯ

ದಾಳಿಯ ಹಿಂದಿನ ಉದ್ದೇಶವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರಿದಿದ್ದು, ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಹೊಣೆ ಹೊತ್ತ ಸಾಮಾಜಿಕ ಮಾಧ್ಯಮ ಪೋಸ್ಟ್
ಇದೇ ವೇಳೆ, ಟೈಗರ್ ಶ್ರಾಫ್ ಅವರ ವಾಹನದ ಮೇಲಿನ ಗುಂಡಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಪರವಾಗಿ ಹೊತ್ತುಕೊಂಡಿರುವುದಾಗಿ ಹೇಳಿಕೊಳ್ಳುವ ಸಾಮಾಜಿಕ ಮಾಧ್ಯಮ ಪೋಸ್ಟ್‌ವೊಂದು ಹರಿದಾಡುತ್ತಿದೆ.
ಅನಿಲ ಪಂಡಿತ್ ಮತ್ತು ಹರ್ಮನ್ ಸಂಧು ಎಂಬ ಹೆಸರುಗಳನ್ನು ಉಲ್ಲೇಖಿಸಿರುವ ವ್ಯಕ್ತಿಗಳು ಈ ಪೋಸ್ಟ್‌ ಮೂಲಕ ದಾಳಿಯ ಹೊಣೆ ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ಪೋಸ್ಟ್‌ನ ಸತ್ಯಾಸತ್ಯತೆ ಹಾಗೂ ದಾಳಿಗೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೂ ಇರುವ ಸಂಬಂಧದ ಕುರಿತು ಪೊಲೀಸರು ಅಧಿಕೃತವಾಗಿ ದೃಢಪಡಿಸಿರುವ ಮಾಹಿತಿ ಲಭ್ಯವಾಗಿಲ್ಲ.
ಘಟನೆಯ ಹಿಂದಿನ ನೈಜ ಕಾರಣ, ದಾಳಿಯಲ್ಲಿ ಭಾಗಿಯಾಗಿರುವವರ ಗುರುತು ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಹೊಣೆಗಾರಿಕೆ ಹೇಳಿಕೆಯ ವಿಶ್ವಾಸಾರ್ಹತೆಯನ್ನು ತನಿಖೆಯ ಮೂಲಕವೇ ಖಚಿತಪಡಿಸಬೇಕಿದೆ.

ಪ್ರಮುಖ ಸುದ್ದಿ :-   ವಿಡಿಯೋ | ನಾನು ಬದುಕಲ್ಲ ಎಂದು ಅನ್ಸಿತ್ತು..ಆದ್ರೆ ಪ್ರಯಾಣಿಕರ ಉಳಿಸಲು ಹೋರಾಡ್ಲೇಬೇಕಿತ್ತು’: ಫ್ಲೈದುಬೈ ದಾಳಿಯ ಭೀಕರ ಕ್ಷಣ ಬಿಚ್ಚಿಟ್ಟ ಪೈಲಟ್‌ ಸ್ಮಿತ್ ಮಚ್ಚಾರ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement