ಸ್ಟಿಂಗ್‌ ಆಪರೇಶನ್‌ ಪ್ರಕರಣ : ರಾಕೇಶ ಶೆಟ್ಟಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯೊಂದರ ಮುಖ್ಯಸ್ಥರಾದ ರಾಕೇಶ ಶೆಟ್ಟಿ ಅವರಿಗೆ ಬೆಂಗಳೂರಿನ 66ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಒಬ್ಬರು ಶ್ಯೂರಿಟಿ ನೀಡುವುದು, ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಎಂದು  ಷರತ್ತು ವಿಧಿಸಿ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ.
ನ್ಯಾಯಾಧೀಶರಾದ ಶಂಕರಪ್ಪ ನಿಬಣ್ಣ ಕಲ್ಕಣಿ ಅವರು ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದು, ಅವರ ಮುಖ್ಯ ನಿರೀಕ್ಷಣಾ ಜಾಮೀನು ಅರ್ಜಿಯ ವಿಲೇವಾರಿಯಾಗುವವರೆಗೆ ಮಧ್ಯಂತರ ರಕ್ಷಣೆ ಮುಂದುವರಿಯಲಿದೆ ಎಂದು ಆದೇಶಿಸಿದ್ದಾರೆ.
ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ತನಿಖೆ ನಡೆಸುತ್ತಿರುವ ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸರು, ರಾಕೇಶ ಶೆಟ್ಟಿ ಅವರನ್ನು ವಿಚಾರಣೆ ನಡೆಸಿದ್ದಾರೆ.
ಕಳೆದ ಒಂದು ವಾರದಿಂದ ಪ್ರಕರಣದ ಮಾಹಿತಿ ಕಲೆ ಹಾಕುತ್ತಿದ್ದ ಸೈಬರ್ ಪೊಲೀಸರು, ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ರಾಕೇಶ ಶೆಟ್ಟಿ, ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement