‘ಮೋದಿ ಕಾ ಬಾಪ್ ಭೀ ಜಾಯೇಗಾ’: ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ವಿವಾದಾತ್ಮಕ ಹೇಳಿಕೆ; ಭುಗಿಲೆದ್ದ ಆಕ್ರೋಶ

ಪಾಟ್ನಾ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಟ್ನಾದಲ್ಲಿ ಕಾರ್ಯಕ್ರಮವೊಂದರಲ್ಲಿ ಹೇಳಿದ ಮಾತು ತೀವ್ರ ವಿವಾದಕ್ಕೆ ಕಾರಣವಾಗಿದೆ.
ಬಿಹಾರದ ಮೊದಲ ಮುಖ್ಯಮಂತ್ರಿ, ಜನಪ್ರಿಯವಾಗಿ ‘ಶ್ರೀ ಬಾಬು’ ಎಂದೇ ಗುರುತಿಸಿಕೊಂಡಿದ್ದ ಡಾ. ಶ್ರೀಕೃಷ್ಣ ಸಿಂಗ್ ಅವರ 139ನೇ ಜನ್ಮದಿನದ ಅಂಗವಾಗಿ ಪಾಟ್ನಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡುತ್ತಿದ್ದಾಗ  “ಮೋದಿ ಕಾ ಬಾಪ್ ಭೀ ಜಾಯೇಗಾ” (ಮೋದಿಯವರ ಅಪ್ಪನೂ ಹೋಗುತ್ತಾರೆ) ಎಂದು ಹೇಳಿರುವುದು ಈಗ ತೀವ್ರ ಟೀಕೆಗೆ ಗುರಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಎಲ್ಲಿಗೂ ಹೋಗುವುದಿಲ್ಲ ( Prime Minister Narendra Modi would not go anywhere) ಎಂದು ಸಭೆಯಲ್ಲಿದ್ದವರೊಬ್ಬರು ಕೂಗಿದಾಗ, ಕೆರಳಿದ ಖರ್ಗೆ  “ಮೋದಿ ಕಾ ಬಾಪ್ ಭೀ ಜಾಯೇಗಾ” (ಮೋದಿಯವರ ಅಪ್ಪನೂ ಹೋಗುತ್ತಾರೆ) ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.
ಅಲ್ಲದೆ, ಖರ್ಗೆ ಭಾಷಣಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿ ಸಭಾಂಗಣದಿಂದ ಹೊರಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಖರ್ಗೆ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಭಿಕರಲ್ಲಿದ್ದ ವ್ಯಕ್ತಿಯೊಬ್ಬರು ಮಧ್ಯೆ ಪ್ರವೇಶಿಸಿ, “ಮೋದಿ ಎಲ್ಲಿಯೂ ಹೋಗುವುದಿಲ್ಲ” ಎಂದು ಕೂಗಿದ್ದಾರೆ. ಇದರಿಂದ ಅಸಮಾಧಾನಗೊಂಡ ಖರ್ಗೆ, ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆಗ ಕಾರ್ಯಕ್ರಮದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿದೆ.
ಖರ್ಗೆ ಮಾತಿಗೆ ಆಕ್ಷೇಪ: ವ್ಯಕ್ತಿಯ ಮೇಲೆ ಹಲ್ಲೆ ಆರೋಪ
ಖರ್ಗೆ ಭಾಷಣಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಳಿಕ ಆ ವ್ಯಕ್ತಿಯನ್ನು ಸಭಾಂಗಣದಿಂದ ಹೊರಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಆದರೆ, ಈ ಆರೋಪಕ್ಕೆ ಈವರೆಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.
 ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಂದಿನ ಎಲ್ಲ ಚುನಾವಣೆಗಳನ್ನು ಮತಪತ್ರಗಳ ಮೂಲಕವೇ ನಡೆಸಬೇಕು ಹಾಗೂ ಕಳೆದ ಎರಡು ವರ್ಷಗಳಲ್ಲಿ ನಡೆದ ಎಲ್ಲ ವಿಧಾನಸಭಾ ಚುನಾವಣೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧದ ಹೋರಾಟವನ್ನು ‘ಎರಡನೇ ಸ್ವಾತಂತ್ರ್ಯ ಸಂಗ್ರಾಮ’ ಎಂದು ಬಣ್ಣಿಸಿದ ಖರ್ಗೆ, ಬಿಹಾರದ ಮೊದಲ ಮುಖ್ಯಮಂತ್ರಿ ಡಾ. ಶ್ರೀಕೃಷ್ಣ ಸಿಂಗ್ ಅವರ 139ನೇ ಜನ್ಮದಿನದ ಅಂಗವಾಗಿ ಪಟನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸುವ ಸಿದ್ಧಾಂತವನ್ನು ಅನುಸರಿಸುತ್ತಿವೆ ಎಂದು ಆರೋಪಿಸಿದ ಅವರು, “ಆರ್‌ಎಸ್‌ಎಸ್‌ನ ಸಿದ್ಧಾಂತವನ್ನು ಹೋಗಲಾಡಿಸದ ಹೊರತು ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ” ಎಂದು ಖರ್ಗೆ ಹೇಳಿದ್ದಾರೆ.
ಮತದಾರರ ಪಟ್ಟಿಯಲ್ಲಿ ಹೆಸರುಗಳ ಅಳಿಸುವಿಕೆ ಆರೋಪ
ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆಯುತ್ತಿವೆ ಹಾಗೂ ಪ್ರತಿಪಕ್ಷಗಳನ್ನು ಬೆಂಬಲಿಸುವವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.ತಮ್ಮ ಹಕ್ಕುಗಳ ರಕ್ಷಣೆಗಾಗಿ ಜನರು ಬೀದಿಗಿಳಿದು ಹೋರಾಟ ನಡೆಸಬೇಕು ಹಾಗೂ ಸಂವಿಧಾನವನ್ನು ಕಾಪಾಡಬೇಕು ಎಂದು ಕರೆ ನೀಡಿದ್ದಾರೆ.
ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ ಅವರು,  ಕಳೆದ ಎರಡು ವರ್ಷಗಳಲ್ಲಿ ನಡೆದ ಎಲ್ಲ ವಿಧಾನಸಭಾ ಚುನಾವಣೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಚುನಾವಣಾ ಆಯೋಗವು ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು; ಜನರಿಗೆ ನ್ಯಾಯಸಮ್ಮತ ಚುನಾವಣೆಯ ಭರವಸೆ ದೊರೆಯಬೇಕು ಎಂದು ಹೇಳಿದ್ದಾರೆ.
ಮುಂಬರುವ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಬೇಕು ಎಂದು ಪುನರುಚ್ಚರಿಸಿದ ಅವರು, ಇದರಿಂದ ಚುನಾವಣೆಯಲ್ಲಿ ಪಾರದರ್ಶಕತೆ ಹೆಚ್ಚುವುದರ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮರುಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement