ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲ ವಿಕೆಟ್ ಪತನವಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕೃಪ ಆಳ್ವ ಅವರ ಹೆಸರನ್ನು ಬಹಿರಂಗವಾಗಿ ಪ್ರಸ್ತಾಪಿಸಿದ್ದರು. ನಂತರ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧದ ಮಾನಹಾನಿಕರ ವಿಡಿಯೊದಲ್ಲಿನ ಆರೋಪವು ಉದ್ದೇಶಪೂರ್ವಕವಾಗಿ ಸೃಷ್ಟಿಸಿದ ಕಟ್ಟುಕಥೆ ಎಂದು ತನಿಖೆ ನಡೆಸಿದ ಬೆಂಗಳೂರು ಪೊಲೀಸರು ಹೇಳಿದ ಬೆನ್ನಲ್ಲೇ ಈ ಉಚ್ಚಾಟನೆ ಕ್ರಮ ಬಂದಿದೆ. ಕೆಪಿಸಿಸಿ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು ಕೃಪಾ ಆಳ್ವ ಅವರ ಉಚ್ಚಾಟನೆ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿರುವುದಾಗಿ ತಿಳಿಸಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೃಪಾ ಆಳ್ವ ಅವರ ಹೆಸರು ಕೇಳಿಬಂದಿದ್ದು, ಈ ವಿಚಾರದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಮಾಧ್ಯಮಗಳಲ್ಲಿ ನಕಾರಾತ್ಮಕ ಪ್ರಚಾರ ಹಾಗೂ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಉಚ್ಚಾಟನೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನಿಮ್ಮ ಹೆಸರು ಕೇಳಿಬಂದಿರುವುದು ಹಾಗೂ ಈ ವಿಚಾರದಲ್ಲಿ ನಿಮ್ಮ ನಡವಳಿಕೆಯು ಪಕ್ಷ ವಿರೋಧಿ ಚಟುವಟಿಕೆಗೆ ಸಮಾನವಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಕೃಪಾ ಆಳ್ವ ಅವರಿಗೆ ಈ ಹಿಂದೆಯೇ ಶೋಕಾಸ್ ನೋಟಿಸ್ ನೀಡಿ, ಪ್ರಕರಣದಲ್ಲಿ ಅವರ ಪಾತ್ರದ ಕುರಿತು ವಿವರಣೆ ಕೇಳಲಾಗಿತ್ತು. ಆದರೆ, ಈವರೆಗೂ ಅವರು ಯಾವುದೇ ಉತ್ತರ ಅಥವಾ ಸಮಜಾಯಿಷಿ ನೀಡಿಲ್ಲ ಎಂದು ಕೆಪಿಸಿಸಿ ತಿಳಿಸಿದೆ.
ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಮಾನಹಾನಿಕರ ವಿಡಿಯೊದ ಹಿಂದೆ ಕೃಪಾ ಆಳ್ವ ಅವರ ಕೈವಾಡವಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಈ ವಿಡಿಯೊವನ್ನು ಪ್ರಸಾರ ಮಾಡದಂತೆ ಹಾಗೂ ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳ ವಿರುದ್ಧ ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ಪಡೆದಿದ್ದರು.
ಇನ್ನೊಂದೆಡೆ, ಸಿದ್ದರಾಮಯ್ಯ ಅವರ ವಿರುದ್ಧ ಮಾನಹಾನಿಕರ ಅಂಶಗಳನ್ನು ಒಳಗೊಂಡಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಿದ ಬೆಂಗಳೂರು ಪೊಲೀಸರು, ವಿಡಿಯೊದಲ್ಲಿನ ಆರೋಪವು ಕಟ್ಟುಕಥೆಯಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ನಿರೂಪಣೆಯಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.
ವಿಡಿಯೊದಲ್ಲಿ ಉಲ್ಲೇಖಿಸಿರುವಂತಹ ಯಾವುದೇ ಘಟನೆ ನಡೆದಿರುವುದಕ್ಕೆ ತನಿಖೆಯ ವೇಳೆ ಸಂಗ್ರಹಿಸಲಾದ ಹೇಳಿಕೆಗಳು ಹಾಗೂ ಸಾಕ್ಷ್ಯಾಧಾರಗಳಲ್ಲಿ ಪುರಾವೆಗಳು ಲಭಿಸಿಲ್ಲ. ಆರೋಪವನ್ನು ಬೆಂಬಲಿಸುವ ಯಾವುದೇ ಅಂಶಗಳು ತನಿಖೆಯಲ್ಲಿ ದೃಢಪಟ್ಟಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ, ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೃಪಾ ಆಳ್ವ ಅವರ ಉಚ್ಚಾಟನೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದಿವೆ.


ನಿಮ್ಮ ಕಾಮೆಂಟ್ ಬರೆಯಿರಿ