ಹಾವೇರಿ: ಕರ್ನಾಟಕ ಗ್ರಾಮ ಆಡಳಿತ ಅಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದ ಅಭ್ಯರ್ಥಿಯೊಬ್ಬರು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಬಳಸಿ, ಗೂಗಲ್ ಲೆನ್ಸ್ (Google Lens) ಮೂಲಕ ಪ್ರಶ್ನೆಪತ್ರಿಕೆಯನ್ನು ಸ್ಕ್ಯಾನ್ ಮಾಡಿ ಉತ್ತರ ಬರೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದ್ದ ಗ್ರಾಮ ಆಡಳಿತ ಅಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಹಾನಗಲ್ನ ಎಳೆಪೇಟೆ ನಿವಾಸಿ ಶಂಕರ ಬನ್ನೂರು ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಹಾನಗಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಶಿಗ್ಗಾಂವಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ನಡೆದ ವಿಎಒ ನೇಮಕಾತಿ ಪರೀಕ್ಷೆಯಲ್ಲಿ ಶಂಕರ ಬನ್ನೂರು 151.25 ಅಂಕ ಗಳಿಸುವ ಮೂಲಕ ಇಡೀ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದರು.
ಪೊಲೀಸ್ ಮೂಲಗಳ ಪ್ರಕಾರ, ಶಂಕರ ಬನ್ನೂರು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಕೊಂಡೊಯ್ದಿದ್ದರು. ಪರೀಕ್ಷೆಯ ವೇಳೆ ಗೂಗಲ್ ಲೆನ್ಸ್ ಅಪ್ಲಿಕೇಶನ್ ಬಳಸಿ ಪ್ರಶ್ನೆಪತ್ರಿಕೆಯನ್ನು ಸ್ಕ್ಯಾನ್ ಮಾಡಿಕೊಂಡು, ಅದರಿಂದ ದೊರೆತ ಮಾಹಿತಿಯ ಆಧಾರದಲ್ಲಿ ಒಎಂಆರ್ (OMR) ಉತ್ತರ ಪತ್ರಿಕೆಯಲ್ಲಿ ಉತ್ತರಗಳನ್ನು ಬರೆದಿದ್ದು, ಇದು ಪರೀಕ್ಷಾ ಕೇಂದ್ರದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಕೃತ್ಯ ಸೆರೆಯಾಗಿದೆ ಎನ್ನಲಾಗಿದೆ.
ಪೊಲೀಸರ ವಿಚಾರಣೆ ವೇಳೆ ಅವರು ನೀಡಿದ ಹೇಳಿಕೆಯ ಪ್ರಕಾರ, ಪರೀಕ್ಷಾ ಕೇಂದ್ರದ ಪ್ರವೇಶದ್ವಾರದಲ್ಲಿ ಆಧಾರ್ ಕಾರ್ಡ್ ಮಾತ್ರ ತೋರಿಸುವಂತೆ ಸೂಚಿಸಲಾಗಿತ್ತು. ಹೀಗಾಗಿ ಮೊಬೈಲ್ ಫೋನ್ ಹೊಂದಿದ್ದರೂ ಯಾವುದೇ ತಪಾಸಣೆ ಇಲ್ಲದೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ಸಿಕ್ಕಿತ್ತು ಎನ್ನಲಾಗಿದೆ.
ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ಬಳಿಕ ಕೊನೆಯ ಸಾಲಿನಲ್ಲಿದ್ದ ಮೇಜಿನ ಮೇಲೆ ತಮಗೆ ನಿಗದಿಪಡಿಸಿದ್ದ ಆಸನ ಸಂಖ್ಯೆಯಲ್ಲಿ ಕುಳಿತು ಮೊಬೈಲ್ ಫೋನ್ ತೆಗೆದು ಗೂಗಲ್ ಲೆನ್ಸ್ ಮೂಲಕ ಪ್ರಶ್ನೆಪತ್ರಿಕೆಯನ್ನು ಸ್ಕ್ಯಾನ್ ಮಾಡಿದ್ದಾರೆ. ಬಳಿಕ ಅದರಿಂದ ದೊರೆತ ಮಾಹಿತಿಯನ್ನು ಆಧರಿಸಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ಉತ್ತರಗಳನ್ನು ಬರೆದಿದ್ದಾರೆ ಎಂದು ವರದಿ ತಿಳಿಸಿದೆ.
ಅಂಕಗಳ ಬಗ್ಗೆ ಇತರ ಅಭ್ಯರ್ಥಿಗಳಿಂದಲೇ ಅನುಮಾನ
ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯಲ್ಲಿ ಶಂಕರ ಬನ್ನೂರು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಅವರ ಫಲಿತಾಂಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಇತರ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೂ (ಕೆಇಎ) ದೂರು ಸಲ್ಲಿಸಿದ್ದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಕರ ಬನ್ನೂರು ಶೇ.40.96ರಷ್ಟು ಅಂಕ ಗಳಿಸಿದ್ದರು. ಪದವಿಪೂರ್ವ ಶಿಕ್ಷಣದ ಪಿಯುಸಿ ಪರೀಕ್ಷೆಯಲ್ಲಿ ಶೇ.49ರಷ್ಟು ಅಂಕ ಪಡೆದಿದ್ದರು. ಅಲ್ಲದೆ, ಈ ಹಿಂದೆ ನಡೆದಿದ್ದ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ಅವರಿಗೆ ದೊರೆತಿದ್ದು ಕೇವಲ 25 ಅಂಕಗಳು ಎನ್ನಲಾಗಿದೆ. ಇಂತಹ ಹಿನ್ನೆಲೆಯ ಅಭ್ಯರ್ಥಿ ವಿಎಒ ನೇಮಕಾತಿ ಪರೀಕ್ಷೆಯಲ್ಲಿ ಒಮ್ಮೆಲೇ 151.25 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಹೇಗೆ ಎಂಬ ಪ್ರಶ್ನೆಯನ್ನು ಇತರ ಅಭ್ಯರ್ಥಿಗಳು ಎತ್ತಿದ್ದರು. ಈ ಹಿನ್ನೆಲೆಯಲ್ಲಿ ಕೆಇಎಗೆ ದೂರು ಸಲ್ಲಿಕೆಯಾಗಿತ್ತು.
ಪರೀಕ್ಷಾ ಕೇಂದ್ರದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ಪಾತ್ರವೂ ತನಿಖೆಯಲ್ಲಿ ಪ್ರಮುಖವಾಗಿದೆ. ಅಭ್ಯರ್ಥಿ ಮೊಬೈಲ್ ಬಳಸಿ ಪ್ರಶ್ನೆಪತ್ರಿಕೆಯನ್ನು ಸ್ಕ್ಯಾನ್ ಮಾಡಿರುವ ದೃಶ್ಯಾವಳಿಗಳು ಸೆರೆಯಾಗಿದೆ ಎನ್ನಲಾಗಿದೆ. ಸದ್ಯ ಈ ಆರೋಪಗಳು ಪೊಲೀಸ್ ತನಿಖೆಯ ಹಂತದಲ್ಲಿದ್ದು, ಕಾನೂನು ಪ್ರಕ್ರಿಯೆಯ ಮೂಲಕ ಸತ್ಯಾಸತ್ಯತೆ ನಿರ್ಧಾರವಾಗಬೇಕಿದೆ.


ನಿಮ್ಮ ಕಾಮೆಂಟ್ ಬರೆಯಿರಿ