ಮಂಗಳೂರು: ವೈಯಕ್ತಿಕ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನದಿಗೆ ಹಾರಿದ್ದ ಮಹಿಳೆಯೊಬ್ಬರು ಮೊಸಳೆಯ ದಾಳಿಗೆ ತುತ್ತಾದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ನದಿಯಲ್ಲಿ ನಡೆದಿದೆ.
ಮೊಸಳೆ ಕಚ್ಚಿದ ನೋವಿನಿಂದ ಮಹಿಳೆ ಜೋರಾಗಿ ಕೂಗಿಕೊಂಡಿದ್ದು, ಆಕೆಯ ಆರ್ತನಾದ ಕೇಳಿದ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಧಾವಿಸಿ ನದಿಯಿಂದ ಅವರನ್ನು ಹೊರಕ್ಕೆ ಕರೆತಂದು ರಕ್ಷಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನದಿಗೆ ಹಾರಿದ್ದ ಮಹಿಳೆಯ ಪಾಲಿಗೆ ಮೊಸಳೆಯ ದಾಳಿಯೇ ಕೊನೆಗೆ ಜೀವ ಉಳಿಸಿಕೊಳ್ಳಲು ಕಾರಣವಾಗಿರುವುದು ಈ ಘಟನೆಯ ವಿಪರ್ಯಾಸ.
ಬುಧವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸೇತುವೆ ಸಮೀಪ ಈ ಘಟನೆ ನಡೆದಿದೆ. ವೈಯಕ್ತಿಕ ವಿಚಾರಗಳಿಂದ ತೀವ್ರವಾಗಿ ನೊಂದಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನದಿಗೆ ಹಾರಿದ್ದರು. ಈ ವೇಳೆ ನೀರಿನಲ್ಲಿದ್ದ ಮೊಸಳೆಯೊಂದು ಆಕೆಯ ಮೇಲೆ ದಾಳಿ ಮಾಡಿದೆ. ಇದರಿಂದ ಗಾಬರಿಗೊಂಡ ಮಹಿಳೆ ನೋವಿನಿಂದ ಜೋರಾಗಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬುಧವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸೇತುವೆ ಸಮೀಪ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಬುಧವಾರ ಮಹಿಳೆ ತಮ್ಮ ಕುಟುಂಬದ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮಹಿಳೆಯ ಕೂಗಾಟ ಸಮೀಪದ ವಸತಿಗೃಹದ ಸಿಬ್ಬಂದಿಯ ಗಮನಕ್ಕೆ ಬಂದಿದೆ. ಕೂಡಲೇ ಅವರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ನದಿಯಲ್ಲಿದ್ದ ಮಹಿಳೆಯನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದಾರೆ.
ಮೊಸಳೆಯ ಕಡಿತದಿಂದ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಪೊಲೀಸರು ಮಹಿಳೆಯ ಕುಟುಂಬದ ಸದಸ್ಯರನ್ನು ಸಂಪರ್ಕಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆಕೆಗೆ ಆಪ್ತ ಸಮಾಲೋಚನೆ (Counselling) ನಡೆಸಿದ ನಂತರ ಕುಟುಂಬದವರೊಂದಿಗೆ ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ. ಮಹಿಳೆಯ ಕುಟುಂಬದವರ ಮನವಿಯ ಮೇರೆಗೆ ಆಕೆಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.


ನಿಮ್ಮ ಕಾಮೆಂಟ್ ಬರೆಯಿರಿ