ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಈ ಕುರಿತು ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಯ ಆದೇಶದ ಪ್ರಕಾರ, ಇದುವರೆಗೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಲಕ್ಷ್ಮೀಪ್ರಿಯಾ ಕೆ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರಿಗೆ ಎಫ್ಇಸಿಸಿ (FECC), ಚುನಾವಣೆಗಳು,

ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಮನ್ವಯತೆ ವಿಭಾಗಗಳ ಜವಾಬ್ದಾರಿ ವಹಿಸಲಾಗಿದೆ. ಅವರ ಜಾಗಕ್ಕೆ ಇ-ಆಡಳಿತ ಇಲಾಖೆಯ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣೆ (EDCS) ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅದೇ ರೀತಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯಪಾಲರ ಆದೇಶದಂತೆ ಈ ವರ್ಗಾವಣೆಗಳನ್ನು ಜಾರಿಗೊಳಿಸಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ ಅವರು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ