ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಮಕ್ಕಳಾಗದ್ದಕ್ಕೆ ದಂಪತಿ ನಡುವೆ ಜಗಳ: ಗಂಡನನ್ನು ಚಾಕುವಿನಿಂದ ಚುಚ್ಚಿ ಕೊಂದ ಪತ್ನಿ

ಬೆಂಗಳೂರು: ಮಕ್ಕಳಾಗದ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯೇ ಪತಿಗೆ ಅಡುಗೆ ಮನೆಯ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು 44 ವರ್ಷದ ರಾಜಶೇಖರ ಎಂದು ಗುರುತಿಸಲಾಗಿದೆ. ಇವರು ಖಾಸಗಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ 35 ವರ್ಷದ ಮಾಲಾಶ್ರೀ ಗೃಹಿಣಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗಾಗಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ದಂಪತಿ ಬೆಂಗಳೂರಿನ ಲಕ್ಷ್ಮೀಪುರದಲ್ಲಿ ವಾಸವಾಗಿದ್ದರು. ಇವರ ವಿವಾಹವಾಗಿ ಐದು ವರ್ಷಗಳಾಗಿದ್ದರೂ ಮಕ್ಕಳಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ರಾಜಶೇಖರ ಹಗಲಿನಲ್ಲಿ ಪತ್ನಿಯೊಂದಿಗೆ ಪ್ರೀತಿಯಿಂದ ವರ್ತಿಸುತ್ತಿದ್ದರು. ಆದರೆ ರಾತ್ರಿ ಮದ್ಯಪಾನ ಮಾಡಿ ಮನೆಗೆ ಮರಳಿದ ಬಳಿಕ ಪತ್ನಿ ಜೊತೆ ಜಗಳವಾಡುತ್ತಿದ್ದರು ಎನ್ನಲಾಗಿದೆ.

ಮಕ್ಕಳಾಗದ ವಿಚಾರವನ್ನು ಮುಂದಿಟ್ಟುಕೊಂಡು ಆಗಾಗ್ಗೆ ಪತ್ನಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಬುಧವಾರ ರಾತ್ರಿ ಕೂಡ ರಾಜಶೇಖರ ಮದ್ಯಪಾನ ಮಾಡಿ ಮನೆಗೆ ಬಂದಿದ್ದು, ಮಕ್ಕಳಾಗದ ವಿಚಾರವಾಗಿ ದಂಪತಿ ನಡುವೆ ಜಗಳ ಆರಂಭವಾಗಿದೆ. ಮಾತಿನ ಚಕಮಕಿ ತೀವ್ರಗೊಂಡ ಸಂದರ್ಭದಲ್ಲಿ ಮಾಲಾಶ್ರೀ ಅಡುಗೆ ಮನೆಯ ಚಾಕುವನ್ನು ತೆಗೆದುಕೊಂಡು ಪತಿಯ ಎದೆಗೆ ಇರಿದಿದ್ದಾರೆ ಎನ್ನಲಾಗಿದೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ರಾಜಶೇಖರ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಈಗ ಅಮೂಲ್ ಹಾಲಿನ ದರವೂ ಏರಿಕೆ

ಚಿಕಿತ್ಸೆಗೆ ಒಳಗಾಗಿದ್ದ ದಂಪತಿ
ದಂಪತಿ ಮಕ್ಕಳಾಗದ ಸಮಸ್ಯೆಗೆ ಸಂಬಂಧಿಸಿದಂತೆ ಫರ್ಟಿಲಿಟಿ ಚಿಕಿತ್ಸೆಗೆ (fertility treatment) ಒಳಗಾಗಿದ್ದರು ಎನ್ನಲಾಗಿದೆ. ಈ ಚಿಕಿತ್ಸೆಯ ಸ್ವರೂಪ ಹಾಗೂ ವೈದ್ಯಕೀಯ ಹಿನ್ನೆಲೆಯನ್ನು ಖಚಿತಪಡಿಸಿಕೊಳ್ಳಲು ಕುಟುಂಬದವರ ಬಳಿ ಸಂಬಂಧಪಟ್ಟ ವೈದ್ಯಕೀಯ ದಾಖಲೆಗಳನ್ನು ಒದಗಿಸುವಂತೆ ಪೊಲೀಸರು ಕೇಳಿದ್ದಾರೆ. “ದಂಪತಿ ಯಾವ ರೀತಿಯ ಚಿಕಿತ್ಸೆಗೆ ಒಳಗಾಗಿದ್ದರು ಎಂಬುದನ್ನು ತಿಳಿದುಕೊಳ್ಳಲು ವೈದ್ಯಕೀಯ ದಾಖಲೆಗಳನ್ನು ಒದಗಿಸುವಂತೆ ಕುಟುಂಬದವರಿಗೆ ಸೂಚಿಸಿದ್ದೇವೆ. ಈ ಕುರಿತು ತನಿಖೆ ಮುಂದುವರಿದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಪತ್ನಿ ಮಾಲಾಶ್ರೀಯನ್ನು ವಿಚಾರಣೆ ನಡೆಸುತ್ತಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement