ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಮುಂಡಗೋಡ : ವೃದ್ಧೆಯ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ; ಕೊಲೆ ಆರೋಪಿಯ ಬಂಧನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಮಲಗಿದ್ದ 75 ವರ್ಷದ ವೃದ್ಧ ಮಹಿಳೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಆಲಳ್ಳಿ ಗ್ರಾಮದ ಕಮಲವ್ವ ತಿರಕಪ್ಪ ಆಡೂರ (75) ಅವರು ಅಕ್ಟೋಬರ್‌ 25ರ ರಾತ್ರಿ ಮನೆಯಲ್ಲೇ ಸಾವಿಗೀಡಾಗಿದ್ದರು. ಹಾಗೂ ಮನೆಯಲ್ಲಿದ್ದ ಹಣ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಇದರಿಂದ ತಾಯಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವರ ಪುತ್ರ ರಾಘವೇಂದ್ರ ಆಡೂರ ಅವರು ನೀಡಿದ ದೂರಿನ ಆಧಾರದಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರಂಭದಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು, ಬಳಿಕ ಕೊಲೆ ನಡೆದಿರುವುದನ್ನು ಪತ್ತೆಹಚ್ಚಿದ್ದಾರೆ. ಪ್ರಕರಣದ ಗಂಭೀರತೆ ಪರಿಗಣಿಸಿ ಶಿರಸಿ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.
ಈ ಪ್ರಕರಣದಲ್ಲಿ ಆರಂಭದಲ್ಲಿ ಮೃತದೇಹವನ್ನು ಪರಿಶೀಲಿಸಿದಾಗ ಯಾವುದೇ ಗಾಯದ ಗುರುತುಗಳು ಅಥವಾ ಇತರ ಸ್ಪಷ್ಟ ಕುರುಹುಗಳು ಪತ್ತೆಯಾಗಿರಲಿಲ್ಲ. ಅಲ್ಲದೆ, ಸಿಸಿಟಿವಿ ದೃಶ್ಯಾವಳಿ, ಕರೆಗಳ ದಾಖಲೆ (ಸಿಡಿಆರ್) ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳೂ ಲಭ್ಯವಿರಲಿಲ್ಲ. ಇಂತಹ ಸವಾಲಿನ ನಡುವೆಯೂ ಪೊಲೀಸರು ತನಿಖೆ ಮುಂದುವರಿಸಿ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಶಾಸಕ ಯತ್ನಾಳ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ

ಪೊಲೀಸ್ ಪ್ರಕಟಣೆಯ ಪ್ರಕಾರ, ತನಿಖೆಯ ಭಾಗವಾಗಿ ನ.13ರಂದು ಸಂಜೆ ಸವಣೂರಿನಲ್ಲಿ ಆಲಳ್ಳಿ ಗ್ರಾಮದ ಮಾರುತಿ ಅಡಿವೆಪ್ಪ ಮುಡಸಾಲಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ಆತ ಕಮಲವ್ವ ಅವರನ್ನು ಕೊಲೆ ಮಾಡಿ ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ. ಆರೋಪಿಯ ಬಳಿಯಿಂದ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟರ್ ಸೈಕಲ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ ಮುಂಡಗೋಡ ಠಾಣೆಯ ಇನ್ಸ್‌ಪೆಕ್ಟರ್ ರಮೇಶ ಎಚ್. ಹಾನಾಪುರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪಿಎಸ್‌ಐಗಳಾದ ಮಂಜುನಾಥ ಗೌಡರ, ರವೀಂದ್ರ ಬಿರಾದರ, ನಿಂಗರಾಜ ಕರಡಿಗುಡ್ಡಿ ಸೇರಿದಂತೆ ಶಿರಸಿ ಉಪವಿಭಾಗದ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ಮುಂಡಗೋಡ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement