

ತುಮಕೂರು: ಪತ್ನಿ ಜೊತೆ ಜಗಳವಾಡುತ್ತಿದ್ದ ತಂದೆಯನ್ನು ತಡೆಯಲು ಮುಂದಾದ 16 ವರ್ಷದ ಮಗನನ್ನೇ ತಂದೆ ಬರ್ಬರವಾಗಿ ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಮೃತನನ್ನು ಸುನೀಲ (16) ಎಂದು ಗುರುತಿಸಲಾಗಿದೆ. ನಂಜೇಗೌಡ (೪೫) ಎಂಬಾತನೇ ಕೊಲೆ ಆರೋಪಿ. ಮದ್ಯವ್ಯಸನಿಯಾಗಿದ್ದ ನಂಜೇಗೌಡ ಪ್ರತಿದಿನ ಕುಡಿದು ಬಂದು ಪತ್ನಿ ರಂಜಿತಾ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ಹಿಂದೆಯೂ ಇದೇ ವಿಚಾರವಾಗಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಜೈಲು ಸೇರಿದ್ದ ನಂಜೇಗೌಡ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎನ್ನಲಾಗಿದೆ.
ಜೈಲಿನಿಂದ ಹೊರಬಂದ ಬಳಿಕವೂ ಆತನ ವರ್ತನೆಯಲ್ಲಿ ಬದಲಾವಣೆಯಾಗಿರಲಿಲ್ಲ. ಭಾನುವಾರ ಬೆಳಗ್ಗೆಯೂ ಕುಡಿದ ಮತ್ತಿನಲ್ಲಿ ಪತ್ನಿ ಜೊತೆ ಜಗಳವಾಡಿ ನಂತರ ಪತ್ನಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಇದನ್ನು ನೋಡಿದ ಮಗ ತಾಯಿಯ ಮೇಲಿನ ಹಲ್ಲೆ ತಡೆಯಲು ಮುಂದಾಗಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ನಂಜೇಗೌಡ ಪತ್ನಿಯನ್ನು ಮನೆಯಿಂದ ಹೊರಗೆ ತಳ್ಳಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾನೆ. ನಂತರ ಮನೆಯಲ್ಲಿದ್ದ ಹಾರೇಕೋಲಿನಿಂದ ಆಯುಧದಿಂದ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಸುನೀಲ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕುಣಿಗಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ನಂಜೇಗೌಡನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.





ನಿಮ್ಮ ಕಾಮೆಂಟ್ ಬರೆಯಿರಿ