

ಶ್ರೀನಗರ: ನವೆಂಬರ್ 11ರಂದು ಸಿಆರ್ಪಿಎಫ್ (CRPF) ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದರೆನ್ನಲಾದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಲತೀಫ್ ಭಟ್ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲರೂ ಗ್ರಾಮದಲ್ಲಿ ಸೋಮವಾರ ಬೃಹತ್ ಕಾರ್ಯಾಚರಣೆ ನಡೆಸಿದ ಸೇನೆ ಹಾಗೂ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿದಿವೆ.
ಲರೂ ಗ್ರಾಮದಲ್ಲಿ ಉಗ್ರರ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತಕ್ಷಣ ಕಾರ್ಯಾಚರಣೆ ಆರಂಭಿಸಿ ಇಡೀ ಪ್ರದೇಶವನ್ನು ಸುತ್ತುವರಿದಿದ್ದವು. ಬಳಿಕ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆ (ಎಸ್ಒಜಿ) ಜಂಟಿಯಾಗಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದವು.
ನವೆಂಬರ್ 11ರಂದು ಕುಲ್ಗಾಮ್ನ ಮಿರ್ ಬಜಾರ್ ಸಮೀಪದ ಸಿಆರ್ಪಿಎಫ್ ಶಿಬಿರದ ಮೇಲೆ ನಡೆದ ದಾಳಿಯ ಪ್ರಮುಖ ಸಂಚುಕೋರ ಲತೀಫ್ ಭಟ್ ಎಂದು ಹೇಳಲಾಗಿದೆ. ಅಂದು ಇಬ್ಬರು ಭಾರೀ ಶಸ್ತ್ರಸಜ್ಜಿತ ಉಗ್ರರು ಸಿಆರ್ಪಿಎಫ್ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಗಾಯಗೊಂಡಿದ್ದರು. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿತ್ತು. ದಾಳಿ ನಡೆಸಿದ ಬಳಿಕ ಉಗ್ರರು ಸಮೀಪದ ಅರಣ್ಯ ಪ್ರದೇಶದೊಳಗೆ ಪರಾರಿಯಾಗಿದ್ದರು.
ಈ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರಿಸಿದ್ದವು. ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್ ಕಮಾಂಡರ್ ಲತೀಫ್ ಭಟ್ ಹಾಗೂ ಮತ್ತೊಬ್ಬ ಉಗ್ರ ಉಮರ್ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.





ನಿಮ್ಮ ಕಾಮೆಂಟ್ ಬರೆಯಿರಿ