ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಶವ ಹೊರತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು !

ಬೆಂಗಳೂರು: ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಶವವನ್ನು ಹೊರತೆಗೆಯಲು ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಸಮೀಪ ಸೋಮವಾರ ಈ ದುರಂತ ಸಂಭವಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಇಬ್ಬರ ಶವಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಆನೇಕಲ್ ತಾಲೂಕಿನ ಕಲ್ಕುಂಟೆ ಅಗ್ರಹಾರ ಗ್ರಾಮದ ಕವಿತಾ ಶ್ರೀನಿವಾಸ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದ ಕವಿತಾ ಇಬ್ಬರು ಮಕ್ಕಳ ತಾಯಿಯಾಗಿದ್ದರು. ಇತ್ತೀಚೆಗೆ ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಪತಿ ಮತ್ತು ಕವಿತಾ ನಡುವೆ ಮನಸ್ತಾಪ ಉಂಟಾಗಿತ್ತು. ಇದರಿಂದ ಮನನೊಂದಿದ್ದ ಅವರು ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನದಿಯಲ್ಲಿ ಮಹಿಳೆಯ ಶವ ತೇಲುತ್ತಿರುವುದನ್ನು ಗಮನಿಸಿದ ದಾರಿಹೋಕರು ಕೂಡಲೇ ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ನದಿಯಿಂದ ಹೊರತೆಗೆಯಲು ಮಾಲೂರು ನಿವಾಸಿ ಮಂಜುನಾಥ ಅವರ ನೆರವು ಕೋರಿದ್ದರು. ಅದರಂತೆ ನದಿಗೆ ಇಳಿದ ಮಂಜುನಾಥ ಅವರು, ಮಹಿಳೆಯ ಶವವನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದಾಗ ತಾವೂ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಮೊಟ್ಟೆ ಸಾಗಾಟ ವಾಹನದಲ್ಲಿ ಕೇರಳಕ್ಕೆ ಎತ್ತುಗಳ ಸಾಗಣೆ

ಘಟನೆಯ ಬೆನ್ನಲ್ಲೇ ಸರ್ಜಾಪುರ ಪೊಲೀಸರ ನಿರ್ಲಕ್ಷ್ಯದ ಆರೋಪವೂ ಕೇಳಿಬಂದಿದೆ. ಶವವನ್ನು ಹೊರತೆಗೆಯುವ ಕಾರ್ಯಾಚರಣೆ ವೇಳೆ ಪೊಲೀಸರು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರಲಿಲ್ಲ. ನೆರವಿಗೆಂದು ಬಂದಿದ್ದ ಮಂಜುನಾಥ ಅವರ ಸುರಕ್ಷತೆಗೂ ಅಗತ್ಯ ವ್ಯವಸ್ಥೆ ಮಾಡಿರಲಿಲ್ಲ. ಪೊಲೀಸರ ಈ ನಿರ್ಲಕ್ಷ್ಯದಿಂದಲೇ ಮಂಜುನಾಥ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಆರೋಪಿಸಲಾಗಿದೆ.
ಇದೀಗ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ದಕ್ಷಿಣ ಪಿನಾಕಿನಿ ನದಿಯಲ್ಲಿ ಇಬ್ಬರ ಶವಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement