

ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಹಾಜರಾಗುವ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಯುವಂತೆ ಸೂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ರಾಜ್ಯಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಏಕರೂಪವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂಬ ಪ್ರಾಧಿಕಾರದ ಪರ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯವು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ.ಎಸ್. ಭರತಕುಮಾರ ಅವರಿದ್ದ ವಿಭಾಗೀಯ ಪೀಠವು, ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಉಪ ಅಧೀಕ್ಷಕರಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆಯೂ ಸೂಚಿಸಿದೆ.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ, ರಾಜ್ಯಾದ್ಯಂತ ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿರುವ ವ್ಯವಸ್ಥೆಗಳಲ್ಲಿ ಏಕರೂಪತೆ ಇರುವಂತೆ ನೋಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.
ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಂಡು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು ಎಂಬ ಪ್ರಾಧಿಕಾರದ ಪರ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ, ಪ್ರಕರಣದಲ್ಲಿ ಮತ್ತಷ್ಟು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿತು. ರಾಜ್ಯಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಏಕರೂಪದ ರೀತಿಯಲ್ಲಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಉಪ ಅಧೀಕ್ಷಕರಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದು ಆದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪರ ವಕೀಲರು, ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಜನಿವಾರ ಧರಿಸಿ ಪರೀಕ್ಷೆಗೆ ಹಾಜರಾಗಲು ಆಯ್ದ ರೀತಿಯಲ್ಲಿ ಅವಕಾಶ ನಿರಾಕರಿಸಿರುವುದು ತಾರತಮ್ಯದ ಕ್ರಮವಾಗಿದೆ. ಈ ಕುರಿತು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬಳಿಕವೂ ಇಂತಹ ಘಟನೆಗಳು ನಡೆದಿವೆ. ಹೀಗಾಗಿ, ಪರೀಕ್ಷೆಗಳ ನಿರ್ವಹಣೆ ಹಾಗೂ ವಿಶೇಷವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ನಡೆಸುವ ದೈಹಿಕ ತಪಾಸಣೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಾಧಿಕಾರದ ಪರ ವಕೀಲರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳು ಧರಿಸಿರುವ ಜನಿವಾರವನ್ನು ತೆಗೆಯುವಂತೆ ಯಾವುದೇ ಸೂಚನೆ ಅಥವಾ ಮಾರ್ಗಸೂಚಿಯನ್ನು ನೀಡಿಲ್ಲ. ಇಂತಹ ಘಟನೆಗಳು ವರದಿಯಾದ ಕಡೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಧಿಕಾರಿಗಳು ಹಾಗೂ ಪರೀಕ್ಷಾ ನಿರ್ವಹಣೆಯಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಲ್ಲದೆ, ವಿದ್ಯಾರ್ಥಿಗಳು ಪಾಲಿಸಬೇಕಾದ ಉಡುಪು ನಿಯಮಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರಬು ನ್ಯಾಯಾಲಯಕ್ಕೆ ತಿಳಿಸಿತು.
ಪ್ರಕರಣದ ಹಿನ್ನೆಲೆ:
2025ರ ಏಪ್ರಿಲ್ 17ರಿಂದ 19ರವರೆಗೆ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕ್ರಮವನ್ನು ಅಸಾಂವಿಧಾನಿಕ, ಸ್ವೇಚ್ಛಾಚಾರದ ಹಾಗೂ ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅರ್ಜಿಯಲ್ಲಿ ಕೋರಿತ್ತು.
ಅಲ್ಲದೆ, ಪರೀಕ್ಷೆಗಳ ನಿರ್ವಹಣೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ದೈಹಿಕ ತಪಾಸಣೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿತ್ತು.
ಇಂತಹ ಕ್ರಮಗಳಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಬೇಕು. ಜನಿವಾರ ಧರಿಸುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ತಾರತಮ್ಯ ಮಾಡಬಾರದು ಹಾಗೂ ಅವರ ಅತ್ಯಾವಶ್ಯಕ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದೂ ಮಹಾಸಭಾ ಅರ್ಜಿಯಲ್ಲಿ ಕೋರಿತ್ತು.





ನಿಮ್ಮ ಕಾಮೆಂಟ್ ಬರೆಯಿರಿ