

ಕಾರವಾರ: ಕಾಡಿನಲ್ಲಿ ಅಪರೂಪಕ್ಕೆ ಕಾಣಸಿಗುವ, ಕಪ್ಪು ಬಣ್ಣದಿಂದ ಗಮನ ಸೆಳೆಯುವ ಕರಿ ಚಿರತೆಯೊಂದು ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡ ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ಕರಿ ಚಿರತೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅದು ಸ್ಥಳದಲ್ಲೇ ಕೊನೆಯುಸಿರೆಳೆದಿದೆ ಎಂದು ವರದಿಯಾಗಿದೆ.
ಕಪ್ಪು ಚಿರತೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಕರಿ ಚಿರತೆಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಚಿರತೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ.
ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸ್ಥಳೀಯರು ರಸ್ತೆ ಬದಿಯಲ್ಲಿ ಕರಿ ಚಿರತೆಯ ಮೃತದೇಹ ಬಿದ್ದಿರುವುದನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತ ಚಿರತೆಯ ಕಳೇಬರವನ್ನು ವಶಕ್ಕೆ ಪಡೆದ ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಿರತೆಗಳು ಕಾಡಿನ ವ್ಯಾಪ್ತಿ ದಾಟಿ ಜನವಸತಿ ಪ್ರದೇಶಗಳತ್ತ ಬರುತ್ತಿರುವ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆಹಾರ ಮತ್ತು ನೀರಿನ ಕೊರತೆ ಹಾಗೂ ಆವಾಸಸ್ಥಾನದಲ್ಲಿನ ಆಗುತ್ತಿರುವ ಬದಲಾವಣೆ ಸೇರಿದಂತೆ ಹಲವು ಕಾರಣಗಳಿಂದ ಚಿರತೆಗಳು ಕಾಡಿನಂಚಿನ ಪ್ರದೇಶಗಳು, ಜನವಸತಿ ಪ್ರದೇಶಗಳು ಮತ್ತು ಹೆದ್ದಾರಿಗಳ ಸಮೀಪ ಕಾಣಿಸಿಕೊಳ್ಳುತ್ತಿವೆ. ಇದರಿಂದ ಸಾರ್ವಜನಿಕರಲ್ಲಿ ಆತಂಕವೂ ಹೆಚ್ಚುತ್ತಿದೆ.
ಆದರೆ, ಕಾಡಿನಿಂದ ಹೊರಬರುವ ವನ್ಯಜೀವಿಗಳಿಗೆ ರಸ್ತೆ ಅಪಘಾತಗಳು ದೊಡ್ಡ ಕಂಟಕವಾಗಿ ಪರಿಣಮಿಸುತ್ತಿವೆ. ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಲುಕಿ ವನ್ಯಜೀವಿಗಳು ಪ್ರಾಣ ಕಳೆದುಕೊಳ್ಳುತ್ತಿವೆ.
ಸಾಮಾನ್ಯ ಚಿರತೆಗಳಿಗಿಂತಲೂ ಹೆಚ್ಚು ಅಪರೂಪವಾಗಿ ಕಾಣಸಿಗುವ ಕರಿ ಚಿರತೆ ಅಪಘಾತಕ್ಕೆ ಬಲಿಯಾಗಿರುವುದು ಜೀವವೈವಿಧ್ಯದ ಸಂರಕ್ಷಣೆಯ ಮಹತ್ವವನ್ನೂ, ಅರಣ್ಯ ಪ್ರದೇಶಗಳ ಮೂಲಕ ಹಾದುಹೋಗುವ ರಸ್ತೆಗಳಲ್ಲಿ ವಾಹನ ಸವಾರರು ವಹಿಸಬೇಕಾದ ಎಚ್ಚರಿಕೆಯ ಅಗತ್ಯವನ್ನೂ ಮತ್ತೊಮ್ಮೆ ನೆನಪಿಸಿದೆ.





ನಿಮ್ಮ ಕಾಮೆಂಟ್ ಬರೆಯಿರಿ