

ಬಾಗಲಕೋಟೆ: ಕೌಟುಂಬಿಕ ಕಲಹದಿಂದ ಬೇಸತ್ತು ಗಂಡ-ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕುಳಲಿ ಗ್ರಾಮದ ಅಪ್ಪಾಶಿ ನಡುವಿನಮನಿ (35) ಮತ್ತು ಅವರ ಪತ್ನಿ ರಾಜೇಶ್ವರಿ (30) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದಿದ್ದ ಅಪ್ಪಾಶಿ ಗುರುವಾರ ಮುಂಜಾನೆ ಮೊದಲು ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ನೇಣಿಗೆ ಶರಣಾಗಿರುವುದನ್ನು ಕಂಡ ಪತ್ನಿ ರಾಜೇಶ್ವರಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಮನೆಯ ಕೋಣೆಗೆ ತೆರಳಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಕ್ಕಪಕ್ಕದವರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ದಂಪತಿಯ ದುರಂತ ಅಂತ್ಯದಿಂದ ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಅನಾಥರಾಗಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮುಧೋಳ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ.





ನಿಮ್ಮ ಕಾಮೆಂಟ್ ಬರೆಯಿರಿ