ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟ ; ಜನವರಿಯಲ್ಲಿ ಜಿಪಂ, ತಾಪಂಗೆ ಚುನಾವಣೆ : ಸಚಿವ ಖಂಡ್ರೆ

ಬೆಂಗಳೂರು: ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಪಂಚಾಯತ (ZP) ಮತ್ತು ತಾಲೂಕು ಪಂಚಾಯತ (TP) ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ. ಮುಂಬರುವ ಜನವರಿ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲಾ ಪಂಚಾಯತಗಳ ಒಟ್ಟು 1,101 ಜಿಪಂ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯತಗಳ 3,580 ತಾಪಂ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ವತಿಯಿಂದ ಜಿಪಂ ಮತ್ತು ತಾಪಂ ಚುನಾವಣೆ ನಡೆಸಲು ಕೈಗೊಳ್ಳಬೇಕಾದ ಅಗತ್ಯ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ ಹಂತದಲ್ಲಿ ರಾಜ್ಯ ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ಪ್ರಕಟಿಸಲಿದ್ದು ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲಿದೆ ಎಂದು ಹೇಳಿದರು.
ಜಿಪಂ ಮತ್ತು ತಾಪಂಗಳ ಆಡಳಿತಾವಧಿ 2022ರಲ್ಲಿಯೇ ಪೂರ್ಣಗೊಂಡಿದ್ದರೂ ಚುನಾವಣೆ ನಡೆದಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ. ಬಳಿಕ ರಾಜ್ಯದಲ್ಲಿ ಆಡಳಿತ ಬದಲಾವಣೆಯಾದ ನಂತರ ಕ್ಷೇತ್ರಗಳ ಪುನರ್‌ವಿಂಗಡಣೆ ಸೇರಿದಂತೆ ಹಲವು ಪ್ರಕ್ರಿಯೆಗಳು ಎದುರಾದವು ಎಂದು ಸಚಿವರು ವಿವರಿಸಿದರು.
ರಾಜ್ಯ ಸರ್ಕಾರ ಕೆಲವು ಪಂಚಾಯತಗಳನ್ನು ಮೇಲ್ದರ್ಜೆಗೇರಿಸಿತ್ತು. ಅಲ್ಲದೆ, ಕೆಲವು ಗ್ರಾಮ ಪಂಚಾಯತ ಕ್ಷೇತ್ರಗಳು ಪುರಸಭೆ, ನಗರಸಭೆ, ನಗರಪಾಲಿಕೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಯಾಗಿದ್ದವು. ಈ ಬದಲಾವಣೆಗಳಿಂದಾಗಿ ಈ ಹಿಂದಿನ ಜಿಪಂಮತ್ತು ತಾಪಂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವ್ಯತ್ಯಾಸ ಉಂಟಾಗಿತ್ತು. ಹೀಗಾಗಿ ಇಂತಹ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡುವುದು ಅನಿವಾರ್ಯವಾಗಿತ್ತು. ಈ ಕಾರಣದಿಂದ ಚುನಾವಣೆ ಪ್ರಕ್ರಿಯೆ ವಿಳಂಬವಾಯಿತು ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸುವ ಮೂಲಕ ತನ್ನ ಜವಾಬ್ದಾರಿಯನ್ನು ಪೂರ್ಣಗೊಳಿಸಿದೆ. ಚುನಾವಣೆ ನಡೆಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ್ದು. ಚುನಾವಣಾ ಆಯೋಗವು ಈ ಸಂಬಂಧ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದೆ. ಬಹುತೇಕ ಜನವರಿ ತಿಂಗಳಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.  https://erajyapatra.karnataka.gov.in/ನಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತಕ್ಕೆ ಸಂಬಂಧಿಸಿದ ಎಲ್ಲ ಅಧಿಸೂಚನೆಗಳೂ ಲಭ್ಯವಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾಗಿರುವುದರಿಂದ ಹಲವು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿದ್ದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಸಂಬಂಧಿ ಕಾರ್ಯಚಟುವಟಿಕೆಗಳು ಗರಿಗೆದರಲಿವೆ.

ಪ್ರಮುಖ ಸುದ್ದಿ :-   ವಾಟ್ಸ್‌ಆ್ಯಪ್ ಚಾಟ್ ಪ್ರಕರಣ; ಎಚ್.ಡಿ. ಕುಮಾರಸ್ವಾಮಿಗೆ ಸೈಬರ್ ಪೊಲೀಸರ ನೋಟಿಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement