

ಬೆಂಗಳೂರು: ನೈರುತ್ಯ ಬಂಗಾಳ ಕೊಲ್ಲಿಯಿಂದ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯವರೆಗೆ ಸಮುದ್ರ ಮಟ್ಟದಿಂದ ಎತ್ತರದಲ್ಲಿ ಬೀಸುತ್ತಿರುವ ಪೂರ್ವ ಮಾರುತಗಳು ಹಾಗೂ ದಕ್ಷಿಣ ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ನವೆಂಬರ್ 28ರ ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 28ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮೂರು ದಿನಗಳ ಕಾಲ ನವೆಂಬರ್ 28ರವರೆಗೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ನವೆಂಬರ್ 27ರ ವರೆಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 72 ಗಂಟೆಗಳ ಕಾಲ ಆಕಾಶವು ಸಾಮಾನ್ಯವಾಗಿ ಮೋಡಕವಿದಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ನಗರದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಕಾರಣದಿಂದಾಗಿ ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಲಿದ್ದು, ಮುಂಜಾನೆ ಹಾಗೂ ರಾತ್ರಿ ವೇಳೆ ತಂಪಾದ ಗಾಳಿ ಬೀಸಲಿದೆ.
ಕರಾವಳಿ ಕರ್ನಾಟಕದಲ್ಲಿ ಗಾಳಿ ಸಹಿತ ಮಳೆ
ಕರಾಔಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಹೀಗಾಗಿ, ನವೆಂಬರ್ 28ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆ ಇರಲಿದ್ದು, ಒಣ ಹವೆ ಮುಂದುವರಿಯಲಿದೆ. ಆದರೆ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ತೀವ್ರತೆ ಹೆಚ್ಚಾಗಬಹುದು. ಮಂಜು ಮುಸುಕಿದ ವಾತಾವರಣ ಕಂಡುಬರಬಹುದು.





ನಿಮ್ಮ ಕಾಮೆಂಟ್ ಬರೆಯಿರಿ