

ನವದೆಹಲಿ: ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ವಿವಾದಿತ ದೀಪಸ್ತಂಭದಲ್ಲಿ (ದೀಪತ್ತೂನ್) ನವೆಂಬರ್ 24ರಂದು ಸಾಂಪ್ರದಾಯಿಕ ದೀಪ ಬೆಳಗದೆ ಇರುವುದಕ್ಕೆ ತಮಿಳುನಾಡು ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಕ್ಷಮೆಯಾಚಿಸಿದೆ. ದೀಪ ಬೆಳಗಿಸುವ ಕಾರ್ಯಕ್ಕಾಗಿ ಉದ್ದೇಶಿಸಲಾಗಿದ್ದ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿಯ ಟ್ರಸ್ಟಿಗಳು ಅನುಮತಿ ನೀಡದ ಕಾರಣ ಸುಪ್ರೀಂ ಕೋರ್ಟ್ನ ಆದೇಶವನ್ನು ಜಾರಿಗೊಳಿಸಲು ಸಾಧ್ಯವಾಗಲಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ಮಧುರೈ ಜಿಲ್ಲಾಧಿಕಾರಿ ನಿಶಾಂತ ಕೃಷ್ಣ ಅವರು ಸುಪ್ರೀಂ ಕೋರ್ಟ್ಗೆ ಸ್ಥಿತಿಗತಿ ವರದಿ ಸಲ್ಲಿಸಿದ್ದು, ನವೆಂಬರ್ 20ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದಂತೆ ದೀಪಸ್ತಂಭದಲ್ಲಿ ದೀಪ ಬೆಳಗಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿತ್ತು ಎಂದು ತಿಳಿಸಿದ್ದಾರೆ.
ನ್ಯಾಯಮೂರ್ತಿಗಳಾದ ಅರವಿಂದಕುಮಾರ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಸಲ್ಲಿಸಿರುವ ವರದಿಯಲ್ಲಿ, ದೇವಾಲಯದ ಆಡಳಿತ ಮಂಡಳಿಯಿಂದ ಅಧಿಕೃತ ಅನುಮತಿ ಪಡೆದ ಸೀಮಿತ ತಂಡದ ಮೂಲಕ ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿತ್ತು. ಈ ಆದೇಶವನ್ನು ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡಿತ್ತು ಎಂದು ವಿವರಿಸಲಾಗಿದೆ.
ಆದರೆ, ದೀಪ ಬೆಳಗಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಪ್ರಸ್ತಾಪಿಸಿದ್ದ ತಂಡಕ್ಕೆ ದೇವಾಲಯದ ಟ್ರಸ್ಟಿಗಳ ಮಂಡಳಿ ಅನುಮತಿ ನೀಡಲಿಲ್ಲ. ಬದಲಾಗಿ, ಕಾರ್ತಿಕೈ ಮಹಾದೀಪಂ ಅನ್ನು ಎಂದಿನಂತೆ ಸಾಂಪ್ರದಾಯಿಕ ಸ್ಥಳದಲ್ಲಿಯೇ ಬೆಳಗಿಸಲು ಮಂಡಳಿ ನಿರ್ಣಯ ಕೈಗೊಂಡಿತು. ಹೀಗಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲು ಸಾಧ್ಯವಾಗಲಿಲ್ಲ ಎಂದು ರಾಜ್ಯ ಸರ್ಕಾರ ವರದಿಯಲ್ಲಿ ತಿಳಿಸಿದೆ.
ಮಂಗಳವಾರ ವಾರ್ಷಿಕ ಕಾರ್ತಿಕೈ ದೀಪಂ ಆಚರಣೆಯ ಸಂದರ್ಭದಲ್ಲಿ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿನ ಕಲ್ಲಿನ ಸ್ತಂಭದಲ್ಲಿ ದೀಪ ಬೆಳಗಿಸದೆ, ಎಂದಿನಂತೆ ಉಚ್ಚಿಪಿಳ್ಳೈಯಾರ್ ಮಂಟಪದಲ್ಲಿಯೇ ದೀಪ ಬೆಳಗಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ತನ್ನ ನವೆಂಬರ್ 20ರ ಆದೇಶದಲ್ಲಿ ಬೆಟ್ಟದ ಮೇಲಿರುವ ದೀಪಸ್ತಂಭದಲ್ಲಿಯೂ ದೀಪ ಬೆಳಗಿಸಲು ಅನುಮತಿ ನೀಡಿತ್ತು.
ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ ತುದಿಯಲ್ಲಿರುವ ಕಲ್ಲಿನ ಸ್ತಂಭವನ್ನೇ ದೀಪತ್ತೂನ್ ಎಂದು ಕರೆಯಲಾಗುತ್ತದೆ. ಈ ಸ್ತಂಭದಲ್ಲಿ ದೀಪ ಬೆಳಗಿಸುವ ವಿಚಾರ ವಿವಾದಕ್ಕೆ ಕಾರಣವಾಗಿದೆ.
‘ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇವೆ, ಉದ್ದೇಶಪೂರ್ವಕ ಉಲ್ಲಂಘನೆಯಲ್ಲ’
ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಸ್ಥಿತಿಗತಿ ವರದಿಯಲ್ಲಿ ಜಿಲ್ಲಾಧಿಕಾರಿ ನಿಶಾಂತ ಕೃಷ್ಣ ಅವರು, ನ್ಯಾಯಾಲಯದ ಆದೇಶವನ್ನು ಪಾಲಿಸಲು ಪ್ರಾಮಾಣಿಕವಾಗಿ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ. ನ್ಯಾಯಾಲಯದ ಯಾವುದೇ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಅಥವಾ ಬೇಕೆಂದೇ ಉಲ್ಲಂಘಿಸಿಲ್ಲ ಎಂದು ತಿಳಿಸಿದ್ದಾರೆ.
“ಈ ಗೌರವಾನ್ವಿತ ನ್ಯಾಯಾಲಯದ ಆದೇಶಗಳನ್ನು ನಾನು ಅತ್ಯಂತ ಗೌರವದಿಂದ ಕಾಣುತ್ತೇನೆ. ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ದೀಪಸ್ತಂಭದಲ್ಲಿ ದೀಪ ಬೆಳಗದಿರುವುದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ದೀಪಸ್ತಂಭದಲ್ಲಿ ದೀಪ ಬೆಳಗಿಸುವುದಕ್ಕಾಗಿ ದೇವಾಲಯದ ಆಡಳಿತ ಮಂಡಳಿಯಿಂದ ಅನುಮತಿ ಪಡೆಯಲು ಜಿಲ್ಲಾಡಳಿತ ಎಲ್ಲ ಪ್ರಯತ್ನಗಳನ್ನೂ ಮಾಡಿತ್ತು” ಎಂದು ಅವರು ವರದಿಯಲ್ಲಿ ತಿಳಿಸಿದ್ದಾರೆ.


ನವೆಂಬರ್ 24ರಂದು ದೇವಾಲಯದ ಟ್ರಸ್ಟಿಗಳ ಮಂಡಳಿ ಸಭೆ ಸೇರಿ, ದೀಪವನ್ನು ಸಾಂಪ್ರದಾಯಿಕ ಸ್ಥಳದಲ್ಲಿಯೇ ಬೆಳಗಿಸುವ ನಿರ್ಣಯ ಕೈಗೊಂಡಿತ್ತು. ಇದರಿಂದಾಗಿ ದೀಪಸ್ತಂಭದಲ್ಲಿ ದೀಪ ಬೆಳಗಿಸುವ ಕಾರ್ಯಕ್ಕೆ ಅನುಮತಿ ದೊರೆಯಲಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ದೇವಾಲಯದ ಆಡಳಿತ ಮಂಡಳಿಯಿಂದ ದೀಪಸ್ತಂಭದಲ್ಲಿ ದೀಪ ಬೆಳಗಿಸಲು ಅಧಿಕೃತ ಅನುಮತಿ ಪಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳ ಸಹಿತ ಹೆಚ್ಚುವರಿ ಸ್ಥಿತಿಗತಿ ವರದಿಯನ್ನು ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮಧುರೈನ ತಿರುಪರಂಕುಂದ್ರಂ ಬೆಟ್ಟದಲ್ಲಿರುವ ‘ದೀಪತ್ತೂನ್’ (ದೀಪ ಹಚ್ಚುವ ಕಂಬ) ದರ್ಗಾವೊಂದರ ಸಮೀಪದಲ್ಲಿರುವುದರಿಂದ, ಅದು ವಿವಾದಕ್ಕೆ ಕಾರಣವಾಗಿದೆ. ಈ ಕಂಬದ ಮೇಲೆ ದೀಪ ಹಚ್ಚುವುದು ಸಂಪ್ರದಾಯವಲ್ಲ ಎಂಬ ತಮಿಳುನಾಡು ಸರ್ಕಾರದ ನಿಲುವನ್ನು ಹಿಂದೂ ಸಂಘಟನೆಯೊಂದು ಪ್ರಶ್ನಿಸಿದೆ.
ಇದೇ ವೇಳೆ, ದೀಪಸ್ತಂಭದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮುಖ್ಯ ಅರ್ಜಿಯ ಅಂತಿಮ ವಿಚಾರಣೆಯನ್ನು ಮುಂದಿನ ವರ್ಷದ ಜನವರಿಯಲ್ಲಿ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆ ಎಂದು ಸಲ್ಲಿಕೆಯಾಗುವ ಯಾವುದೇ ನ್ಯಾಯಾಂಗ ನಿಂದನೆ ಅರ್ಜಿಯನ್ನೂ (ಕಂಟೆಂಪ್ಟ್ ಪಿಟಿಷನ್) ನ್ಯಾಯಪೀಠ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.



ನಿಮ್ಮ ಕಾಮೆಂಟ್ ಬರೆಯಿರಿ