ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ವಿನಯ ಕುಲಕರ್ಣಿಗೆ ಬಿಗ್ ಶಾಕ್ ; ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್, 2 ವಾರದಲ್ಲಿ ಶರಣಾಗಲು ಸೂಚನೆ

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದೆ. ಹಾಗೂ   ವಾರಗಳ ಒಳಗಾಗಿ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗುವಂತೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಪ್ರಶಾಂತಕುಮಾರ ಮಿಶ್ರಾ ಮತ್ತು ಚಂದ್ರಶೇಖರ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಮೇಲ್ಮನವಿಯಲ್ಲಿ ಪ್ರಶ್ನಿಸಲಾಗಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಅಪರಾಧಿಗಳ ಪರವಾಗಿ ಸಲ್ಲಿಸಲಾಗಿದ್ದ ಜಾಮೀನು ಬಾಂಡ್‌ಗಳನ್ನು ರದ್ದುಪಡಿಸಲಾಗಿದ್ದು, ಎರಡು ವಾರಗಳ ಒಳಗಾಗಿ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ಪೀಠ ಸ್ಪಷ್ಟಪಡಿಸಿದೆ.
ಇದೇ ವೇಳೆ, ವಿಚಾರಣಾ ನ್ಯಾಯಾಲಯ ನೀಡಿರುವ ಶಿಕ್ಷೆ ಹಾಗೂ ಅಪರಾಧ ನಿರ್ಣಯದ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಜಿಮ್‌ನಲ್ಲೇ ಬಿಜೆಪಿ ನಾಯಕನ ಹತ್ಯೆ
ಧಾರವಾಡದ ಯೋಗೇಶ ಗೌಡ ಅವರನ್ನು 2016ರ ಜೂನ್‌ನಲ್ಲಿ ಧಾರವಾಡದಲ್ಲಿರುವ ಅವರ ಜಿಮ್‌ನಲ್ಲೇ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಲಾಗಿತ್ತು. ಸಿಬಿಐ 2020ರಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿತ್ತು.
ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ 2021ರ ಆಗಸ್ಟ್‌ನಲ್ಲಿ ವಿನಯ್ ಕುಲಕರ್ಣಿ ಅವರಿಗೆ ಕೆಲವು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ, ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅವರು ಪ್ರಯತ್ನಿಸಿರುವುದಕ್ಕೆ ಮೇಲ್ನೋಟಕ್ಕೆ ಸಾಕಷ್ಟು ಆಧಾರಗಳಿವೆ ಎಂದು ಪರಿಗಣಿಸಿದ ಸುಪ್ರೀಂ ಕೋರ್ಟ್, 2025ರ ಜೂನ್‌ನಲ್ಲಿ ಅವರ ಜಾಮೀನನ್ನು ರದ್ದುಗೊಳಿಸಿತ್ತು.

ಪ್ರಮುಖ ಸುದ್ದಿ :-   ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟ ; ಜನವರಿಯಲ್ಲಿ ಜಿಪಂ, ತಾಪಂಗೆ ಚುನಾವಣೆ : ಸಚಿವ ಖಂಡ್ರೆ

ಜೀವಾವಧಿ ಶಿಕ್ಷೆ ವಿಧಿಸಿದ್ದ ನ್ಯಾಯಾಲಯ
2026ರ ಏಪ್ರಿಲ್ 15ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳನ್ನು ಕೊಲೆ ಮತ್ತು ಕ್ರಿಮಿನಲ್ ಸಂಚು ಆರೋಪಗಳಲ್ಲಿ ದೋಷಿಗಳೆಂದು ಘೋಷಿಸಿತ್ತು ಹಾಗೂ ಜೀವಾವಧಿ ಶಿಕ್ಷೆ ವಿಧಿಸಿತ್ತು.
ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ ಕುಲಕರ್ಣಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್ ಅವರ ಅಪರಾಧ ನಿರ್ಣಯಕ್ಕೆ ತಡೆಯಾಜ್ಞೆ ನೀಡಿತ್ತು. ಅಲ್ಲದೆ, ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಅಪರಾಧಿಗಳ ಶಿಕ್ಷೆಗಳನ್ನೂ ಅಮಾನತುಗೊಳಿಸಿತ್ತು.
ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿನಯ ಕುಲಕರ್ಣಿ ಅವರ ಅಪರಾಧ ನಿರ್ಣಯಕ್ಕೆ ನೀಡಲಾಗಿದ್ದ ತಡೆಯಾಜ್ಞೆ ಹಾಗೂ ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು.
ಇದೀಗ ಬುಧವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. ಹಾಗೂ ಅವರೆಲ್ಲರೂ ಎರಡು ವಾರಗಳ ಒಳಗಾಗಿ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ.

ಪ್ರಮುಖ ಸುದ್ದಿ :-   ‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ರಾಜ್ಯ ಸರ್ಕಾರ ಆದೇಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement