

ಬೆಂಗಳೂರು: ಬಸವಣ್ಣ ಮತ್ತು ಅವರ ವಚನಗಳ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ಆರೋಪಿತ ಪ್ರಕರಣದಲ್ಲಿ ಅಮೆರಿಕ ಮೂಲದ ಕನ್ನಡ ಲೇಖಕ ರವಿ ಹಂಜ್ ಮತ್ತು ಪುಸ್ತಕ ಪ್ರಕಾಶರಾದ ವಿಶ್ವೇಶ್ವರ ಭಟ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಮೋಹನ ಪ್ರಭು ಅವರು ಇಬ್ಬರೂ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ್ದಾರೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.
ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಸೆಕ್ಷನ್ 192, 196(1), 353(2) ಮತ್ತು 299ರ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ.
ರವಿ ಹಂಜ್ ಪರವಾಗಿ ಹಿರಿಯ ವಕೀಲ ಅರುಣ ಶ್ಯಾಮ ವಾದ ಮಂಡಿಸಿದ್ದರು. ಹೇಳಿಕೆಗಳು ಐತಿಹಾಸಿಕ ದಾಖಲೆಗಳ ಅಧ್ಯಯನ ಮತ್ತು ಸಂಶೋಧನೆಯನ್ನು ಆಧರಿಸಿವೆ. ಬಸವಣ್ಣನವರನ್ನು ಅವಮಾನಿಸುವ ಅಥವಾ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶ ಲೇಖಕರಿಗೆ ಇರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ವಾದ ಮಂಡಿಸಿದ್ದ ಸರ್ಕಾರಿ ಅಭಿಯೋಜಕರು, ಅರ್ಜಿದಾರರು ತಮ್ಮ ಕೃತಿಯ ಮೂಲಕ ಜಗಜ್ಯೋತಿ ಬಸವಣ್ಣನವರಿಗೆ ಅಪಮಾನ ಮಾಡಿದ್ದಾರೆ. ಇದರಿಂದ ಸಮಾಜದ ಭಾವನೆಗಳಿಗೆ ಧಕ್ಕೆಯಾಗಿದ್ದು, ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ಎರಡು ಕಡೆ ವಾದ ಆಲಿಸಿ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು, ಬುಧವಾರ ನಿರೀಕ್ಷನಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.





ನಿಮ್ಮ ಕಾಮೆಂಟ್ ಬರೆಯಿರಿ