

ಬೆಂಗಳೂರು: ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ವಡಾದಲ್ಲಿ ಬೋಲ್ಟ್ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬೆಂಗಳೂರು-ಬೆಳಗಾವಿ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ನೀಡಿದ್ದ ವಡಾದಲ್ಲಿ ದೊಡ್ಡ ಬೋಲ್ಟ್ ಸಿಕ್ಕಿದೆ. ಈ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಾಗೂ ವಿಡಿಯೊ ಹಂಚಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ( IRCTC) ಪ್ರತಿಕ್ರಿಯಿಸಿದ್ದು, ಸಂಬಂಧಪಟ್ಟ ಆಹಾರ ಪೂರೈಕೆದಾರರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.
ಸಮರ್ಥ ಕೊಡಿಯಾಲ್ ಎಂಬ ಪ್ರಯಾಣಿಕರು ಈ ಘಟನೆಯ ಬಗ್ಗೆ ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಾವು ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ರೈಲಿನಲ್ಲಿ ನೀಡಲಾದ ಊಟದಲ್ಲಿದ್ದ ವಡಾದಲ್ಲಿ ಬೋಲ್ಟ್ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ರೈಲಿನಲ್ಲಿ ಪ್ರಯಾಣಿಕರಿಗೆ ಪೂರೈಸುವ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನೆ ಎತ್ತಿರುವ ಅವರು, ಈ ಘಟನೆಯನ್ನು ಭಾರತೀಯ ರೈಲ್ವೆ ಮತ್ತು ಐಆರ್ಸಿಟಿಸಿ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಪೋಸ್ಟ್ನೊಂದಿಗೆ ಆಹಾರದ ಫೋಟೊ ಹಾಗೂ ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ತಟ್ಟೆಯಲ್ಲಿರುವ ಅರ್ಧ ತಿಂದ ವಡಾ ಹಾಗೂ ಅದರ ಪಕ್ಕದಲ್ಲಿ ಬಿದ್ದಿರುವ ದೊಡ್ಡ ಗಾತ್ರದ ಬೋಲ್ಟ್ ಸ್ಪಷ್ಟವಾಗಿ ಕಾಣಿಸುತ್ತದೆ. ಆಹಾರದಲ್ಲಿ ಇಂತಹ ವಸ್ತು ಪತ್ತೆಯಾಗಿರುವುದು ರೈಲಿನಲ್ಲಿ ಪೂರೈಸಲಾಗುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಆತಂಕಕ್ಕೆ ಕಾರಣವಾಗಿದೆ.


ಐಆರ್ಸಿಟಿಸಿಯಿಂದ ಕ್ರಮದ ಭರವಸೆ
ಪ್ರಯಾಣಿಕರ ದೂರಿಗೆ ಪ್ರತಿಕ್ರಿಯಿಸಿರುವ ಐಆರ್ಸಿಟಿಸಿ, ಘಟನೆಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ. ಅಲ್ಲದೆ, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಸೇವಾ ಪೂರೈಕೆದಾರರ ವಿರುದ್ಧ ಕಠಿಣ ದಂಡನಾತ್ಮಕ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಇದಲ್ಲದೆ, ಅಡುಗೆ ಘಟಕದಲ್ಲಿನ ಸಿಬ್ಬಂದಿಗೆ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಐಆರ್ಸಿಟಿಸಿ ಹೇಳಿದೆ.
ಆಹಾರ ತಯಾರಿಕೆ ಆರಂಭಿಸುವ ಮೊದಲು ಅಡುಗೆಮನೆಯ ಸಂಪೂರ್ಣ ಪರಿಶೀಲನೆ ನಡೆಸಬೇಕು ಹಾಗೂ ಆಹಾರ ತಯಾರಿಕೆಗೆ ಬಳಸುವ ಎಲ್ಲವೂ ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಐಆರ್ಸಿಟಿಸಿ ತನ್ನ ಉತ್ತರದಲ್ಲಿ ತಿಳಿಸಿದೆ.



ನಿಮ್ಮ ಕಾಮೆಂಟ್ ಬರೆಯಿರಿ