ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಕ್ರಿಕೆಟಿಗ ಮೊಹಮ್ಮದ್ ಶಮಿ; ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹ

ನವದೆಹಲಿ: ಭಾರತದ ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆಯೇ? ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಶಮಿ ಅವರು ಭೇಟಿಯಾಗಿರುವ ಬೆನ್ನಲ್ಲೇ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಊಹಾಪೋಹಗಳು ತೀವ್ರಗೊಂಡಿವೆ. ಆದರೆ, ಶಮಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಗ್ಗೆ ಪಕ್ಷದ ವತಿಯಿಂದ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಈ ಭೇಟಿಯ ಸಂದರ್ಭದಲ್ಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಕುನ್ವರ್ ಬಾಸಿತ್ ಅಲಿ ಕೂಡ ಉಪಸ್ಥಿತರಿದ್ದರು. ಶಮಿ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಹಾಗೂ ಕುತೂಹಲವೂ ಹೆಚ್ಚಾಗಿದೆ.
ಇದಕ್ಕೂ ಒಂದು ವಾರದ ಹಿಂದಷ್ಟೇ ಮತ್ತೊಬ್ಬ ಖ್ಯಾತ ಕ್ರಿಕೆಟಿಗ ಯುಜ್ವೇಂದ್ರ ಚಹಲ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದಾರೆ ಎಂದು ಬಿಜೆಪಿ ಪ್ರಕಟಿಸಿತ್ತು.
ಪಕ್ಷದಲ್ಲಿ ಜವಾಬ್ದಾರಿ ನೀಡಿರುವುದಕ್ಕೆ ಚಹಲ್ ಬಿಜೆಪಿ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಿದ್ದರು. ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದ ಅವರು, “ಬಿಜೆಪಿ ಕುಟುಂಬದಲ್ಲಿ ನನಗೆ ಸ್ಥಾನ ಮತ್ತು ಗೌರವ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಹಾಗೂ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅಮರಪಾಲ ಮೌರ್ಯ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ತಿಳಿಸಿದ್ದರು.
ಚಹಲ್ ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಏಕದಿನ ಹಾಗೂ ಟಿ20 ಸೇರಿದಂತೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮುಂದುವರಿಯಲಿದ್ದಾರೆ. 2016ರಲ್ಲಿ ಅವರು ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
ಟೆಸ್ಟ್ ಕ್ರಿಕೆಟ್‌ಗೆ ಮೊಹಮ್ಮದ್ ಶಮಿ ನಿವೃತ್ತಿ
ಇನ್ನು ಭಾರತದ ಪ್ರಮುಖ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿರುವ ಮೊಹಮ್ಮದ್ ಶಮಿ ನವೆಂಬರ್ 6ರಂದು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 36 ವರ್ಷದ ಶಮಿ 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಭಾರತ ತಂಡದ ಪರ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಒಟ್ಟು 64 ಪಂದ್ಯಗಳನ್ನಾಡಿರುವ ಅವರು 229 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆರು ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆದಿರುವುದು ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಸ್ಥಿರ ಹಾಗೂ ಪರಿಣಾಮಕಾರಿ ಬೌಲಿಂಗ್ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ.
ಹೊಸ ಚೆಂಡಿನೊಂದಿಗೆ ಮಾತ್ರವಲ್ಲದೆ ಹಳೆಯ ಚೆಂಡಿನಲ್ಲಿಯೂ ಚೆಂಡನ್ನು ಸ್ವಿಂಗ್ ಮಾಡುವ ಅಪೂರ್ವ ಸಾಮರ್ಥ್ಯ ಶಮಿ ಅವರದ್ದಾಗಿತ್ತು. ವಿಶೇಷವಾಗಿ ವಿದೇಶಿ ನೆಲದಲ್ಲಿ ನಡೆದ ಪಂದ್ಯಗಳಲ್ಲಿ ಭಾರತದ ಬೌಲಿಂಗ್ ದಾಳಿಗೆ ಅವರು ಮಹತ್ವದ ಬಲವಾಗಿದ್ದರು.
ಭಾರತದ ಹೊರಗೆ ಆಡಿದ 41 ಟೆಸ್ಟ್ ಪಂದ್ಯಗಳಲ್ಲಿ ಶಮಿ 30.33ರ ಸರಾಸರಿಯಲ್ಲಿ 145 ವಿಕೆಟ್‌ಗಳನ್ನು ಪಡೆದಿದ್ದಾರೆ. ನಿಖರತೆ, ಚೆಂಡಿನ ಚಲನೆ ಹಾಗೂ ಸುದೀರ್ಘ ಸ್ಪೆಲ್‌ಗಳನ್ನು ಎಸೆಯುವ ಸಾಮರ್ಥ್ಯ ಅಗತ್ಯವಿದ್ದ ವಿದೇಶಿ ಪಿಚ್‌ಗಳಲ್ಲಿಯೂ ಅವರು ವಿಶ್ವಾಸಾರ್ಹ ಬೌಲರ್ ಆಗಿ ಗುರುತಿಸಿಕೊಂಡಿದ್ದರು.
2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವೇ ಶಮಿ ಅವರ ಕೊನೆಯ ಟೆಸ್ಟ್ ಪಂದ್ಯವಾಗಿತ್ತು. ವೃತ್ತಿಜೀವನದ ವಿವಿಧ ಹಂತಗಳಲ್ಲಿ ಗಾಯದ ಸಮಸ್ಯೆಗಳು ಅವರನ್ನು ಕಾಡಿದ್ದರೂ, ತಂಡಕ್ಕೆ ಲಭ್ಯರಾದ ಸಂದರ್ಭಗಳಲ್ಲಿ ಮಹತ್ವದ ಕೊಡುಗೆಗಳನ್ನು ನೀಡುತ್ತಿದ್ದರು.
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರೂ, ಏಕದಿನ ಹಾಗೂ ಟಿ20 ಸೇರಿದಂತೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಆಡುವುದನ್ನು ಮುಂದುವರಿಸುವುದಾಗಿ ಶಮಿ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಯುಜ್ವೇಂದ್ರ ಚಹಲ್ ಬಿಜೆಪಿ ಸೇರ್ಪಡೆಯಾಗಿರುವ ಬೆನ್ನಲ್ಲೇ ಮೊಹಮ್ಮದ್ ಶಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಆದರೆ, ಶಮಿ ಅವರ ರಾಜಕೀಯ ಪ್ರವೇಶದ ಕುರಿತು ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement