ಶಿಗ್ಗಾಂವಿ : ಹೆದ್ದಾರಿ ಪಕ್ಕ ನಿಂತಿದ್ದವರಿಗೆ ಕಾರು ಡಿಕ್ಕಿ ; ಇಬ್ಬರು ಸಾವು

ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನು ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಕುರುಬರ (53) ಎಂದು ಗುರುತಿಸಲಾಗಿದೆ. ಇಬ್ಬರೂ ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದರು. ಆಗ ವೇಗವಾಗಿ ಬಂದ ಕಾರು ಇಬ್ಬರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ವಿರೂಪಾಕ್ಷಪ್ಪ ಅವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಚಿದಾನಂದ ಕುರುಬರ ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಕಾರಣ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮತ್ತೋರ್ವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ್ದರಿಂದ ಆಕ್ರೋಶಗೊಂಡ ಸ್ಥಳೀಯರು ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಚಾಲಕನನ್ನ ಶಿಗ್ಗಾಂವಿ ಪೋಲಿಸರು ಬಂದಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement