ಬೆಂಗಳೂರು : ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ; ಮುಖ್ಯ ಶಿಕ್ಷಕಿ ಅಮಾನತು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯದ ಅಂಧ್ರಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ್ದ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ನಂತರ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಘಟನೆ ವರದಿಯಾಗುತ್ತಿದ್ದಂತೆಯೇ ಅಂಧ್ರಹಳ್ಳಿ ಸರ್ಕಾರಿ ಶಾಲೆಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಸುಮಾರು 640ರಷ್ಟು ಮಕ್ಕಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕೋಲಾರದ ಘಟನೆಯ ನಂತರವೂ ಕೂಡ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸರ್ಕಾರ ಈ ರೀತಿಯ ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಘಟನೆಯ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, “ಘಟನೆ ಸಂಬಂಧ ಸಭೆ ಕರೆದಿದ್ದೇನೆ. ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ. ಶಾಲಾ ಮಕ್ಕಳನ್ನು ಯಾರೂ ದುರುಪಯೋಗ ಮಾಡಿಕೊಳ್ಳಬಾರದು. ಎನ್‌ಎಸ್‌ಎಸ್‌ ಇದ್ದಾಗ ಗಿಡ ನೆಡುವುದು, ಸ್ವಚ್ಛತೆ ಮಾಡುವ ಕೆಲಸ ಮಾಡುತ್ತಿದ್ದರು. ಆದರೆ ಶೌಚಾಲಯ ಸ್ವಚ್ಛತೆ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ” ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement