ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಮಹಾರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು,ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಮಂಗಳವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದಿಂದ ಆಗಮಿಸುವ ವ್ಯಕ್ತಿಗಳ ಕುರಿತು ವಿಶೇಷ ಕಣ್ಗಾವಲು ಕ್ರಮಗಳನ್ನು ಅನುಸರಿಸುವ ಸೂಚನೆಗಳನ್ನು ನೀಡಲಾಗಿದೆ. ಮಹಾರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಿಶೇಷ ಕಣ್ಗಾವಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ. ವಿಮಾನ, ರೈಲು, ಬಸ್, ಟ್ಯಾಕ್ಸಿ, ಸ್ವಂತ ವಾಹನದ ಮೂಲಕ ಕರ್ನಾಟಕಕ್ಕೆ ಆಗಮಿಸುವ ಜನರು 72 ಗಂಟೆಗಳ ಮೊದಲ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ವಿಮಾನಯಾನ ಸಂಸ್ಥೆಗಳು 72 ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರುವ ಜನರಿಗೆ ಮಾತ್ರ ಬೋರ್ಡಿಂಗ್ ಪಾಸ್ ನೀಡಬೇಕು ಎಂದು ತಿಳಿಸಿದೆ.
ರೈಲ್ವೆ ಪ್ರಾಧಿಕಾರವು ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ನೆಗೆಟಿವ್ ವರದಿ ಅಥವ ಲಸಿಕೆ ಪ್ರಮಾಣ ಪತ್ರ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಬಸ್‌ಗಳ ಮೂಲಕ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರುವುದನ್ನು ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು.
ವಿಶೇವಾಗಿ ಮಹಾರಾಷ್ಟ್ರದ ಜೊತೆ ಗಡಿ ಹೊಂದಿರುವ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನ ಚಾಲಕರು/ ಸಹಾಯಕರು/ ಪ್ರಯಾಣಿಕರು ಕರ್ನಾಟಕ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಇದಕ್ಕಾಗಿ ಜಿಲ್ಲಾಡಳಿತ ಚೆಕ್‌ ಪೋಸ್ಟ್‌ನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement