ಕರ್ನಾಟಕ ಬಜೆಟ್‌ : ಅಡಕೆ ಬೆಳೆ ಎಲೆ ಚುಕ್ಕಿ ರೋಗ ನಿಯಂತ್ರಣ ಅಧ್ಯಯನ ಚಟುವಟಿಕೆಗೆ 10 ಕೋಟಿ ರೂ. ಅನುದಾನ

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ.
ಅಡಕೆ ಮರಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಂಬಂಧ ನಡೆಸುವ ಅಧ್ಯಯನ ಚಟುವಟಿಕೆ ನಡೆಸಲು 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ.
ಅಡಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ರೋಗ-ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯನ್ನು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ ಉತ್ತೇಜನಕ್ಕೆ 64 ಕೋಟಿ ರೂ.
ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ಸರ್ಕಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಿದೆ ಎಂದು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ರಾಜ್ಯದ ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಹಂತ ಹಂತವಾಗಿ ಶೀತಲಗೃಹಗಳನ್ನು ನಿರ್ಮಿಸುವ ಯೋಜನೆಯೂ ಸರ್ಕಾರದ ಮುಂದಿದೆ ಎಂದು ಹೇಳಲಾಗಿದೆ.
ಜೊತೆಗೆ ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿರುವ ಲಭ್ಯ ಜಮೀನನ್ನು ಬಳಸಿಕೊಂಡು ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement