ಬೆಂಗಳೂರು : ಕರ್ನಾಟಕದಲ್ಲಿ ಎಚ್1ಎನ್1 (H1N1)ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಸ್ಥಿತಿಯ ಸಮಗ್ರ ಪರಿಶೀಲನೆಗೆ ಮುಂದಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಿದೆ.
ಹವಾಮಾನ ಬದಲಾವಣೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ವೈರಲ್ ಸೋಂಕುಗಳು ವೇಗವಾಗಿ ಹರಡುತ್ತಿವೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಚ್1ಎನ್1 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ವಿಶೇಷವಾಗಿ ಸಣ್ಣ ಮಕ್ಕಳು, ವೃದ್ಧರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಜ್ವರ, ಕೆಮ್ಮು, ಗಂಟಲು ನೋವು ಸೇರಿದಂತೆ ಸೋಂಕಿನ ಲಕ್ಷಣಗಳುಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಹೆಚ್ಚುತ್ತಿರುವ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ತೀವ್ರ ಜ್ವರ, ನಿರಂತರ ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುವುದು ಹಾಗೂ ಸೋಂಕಿನ ಲಕ್ಷಣಗಳಿರುವವರಿಂದ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ