ಸಿಎಎಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಏಪ್ರಿಲ್ 8 ರ ವರೆಗೆ ನ್ಯಾಯಾಲಯವು ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶವನ್ನು ನೀಡಿದೆ.
ಈ ಕುರಿತು ಕೇಂದ್ರಕ್ಕೆ ನೋಟಿಸ್‌ ನೀಡಿರುವ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಹಾಗೂ ಮನೋಜ ಮಿಶ್ರಾ ಅವರನ್ನೊಳಗೊಂಡ ಪೀಠವು ಏಪ್ರಿಲ್ 8ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಏಪ್ರಿಲ್ 9ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದರು. ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಇದನ್ನು ವಿರೋಧಿಸಿದರು.

“ತಡೆಯಾಜ್ಞೆಯ ಅರ್ಜಿಗೆ ಉತ್ತರಿಸಲು ನಾಲ್ಕು ವಾರಗಳು ಹೆಚ್ಚಾಯಿತು. ಸಿಎಎ ಮಂಡಿಸಿದ ನಾಲ್ಕು ವರ್ಷಗಳ ಬಳಿಕ ನಿಯಮಾವಳಿಗಳನ್ನು ವಿಧಿಸಿ ಈಗ ಅಧಿಸೂಚನೆ ಹೊರಡಿಸಲಾಗಿದೆ. ಈಗ ಪೌರತ್ವ ನೀಡಿದರೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಒಮ್ಮೆ ಪೌರತ್ವ ನೀಡಿದ ಬಳಿಕ ಅದನ್ನು ಹಿಂಪಡೆಯುವಂತಿಲ್ಲ. ಸಿಎಎ ಮಂಡಿಸಿದ ಸುಮಾರು ನಾಲ್ಕು ವರ್ಷಗಳ ನಂತರ ನಿಯಮಾವಳಿಗಳನ್ನು ವಿಧಿಸುವ ಹಠಾತ್ ತುರ್ತು ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದರು.
ಇದಕ್ಕೆ ಆಕ್ಷೇಪಿಸಿದ ತುಷಾರ ಮೆಹ್ತಾ, “ಸಿಬಲ್‌ ಅವರು ಶಾಸನಬದ್ಧ ನಿಯಮಗಳಿಗೆ ತಡೆಯಾಜ್ಞೆ ಕೋರುತ್ತಿದ್ದಾರೆ” ಎಂದರು. ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡುವುದಾಗಿ ನ್ಯಾಯಾಲಯ ಹೇಳಿತು.
ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುವಾಗ ನಿಯಮಗಳಂತೆ ಯಾವುದೇ ಪೌರತ್ವವನ್ನು ನೀಡದಿರಲು ಸರ್ಕಾರ ಒಪ್ಪಬೇಕು ಎಂದು ವಾದಿಸಿದರು. ಹಿರಿಯ ವಕೀಲ ರಂಜಿತ್ ಕುಮಾರ್ ಕೂಡ ವಾದ ಮಂಡಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆಬದಿ ರೋಲ್‌ ಮಾರುವ 10 ವರ್ಷದ ಬಾಲಕನ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ; ಸ್ಫೂರ್ತಿಯೂ ಹೌದು; ಸಹಾಯ ಮಾಡುವೆ ಎಂದ ಆನಂದ ಮಹೀಂದ್ರಾ

ಸಿಎಎ, ಅಕ್ರಮ ವಲಸಿಗರನ್ನು ವ್ಯಾಖ್ಯಾನಿಸುವ 1955ರ ಪೌರತ್ವ ಕಾಯಿದೆಯ ಸೆಕ್ಷನ್ 2ಕ್ಕೆ ಸಂಸತ್ತು 2019ರಲ್ಲಿ ತಿದ್ದುಪಡಿ ಮಾಡಿತ್ತು. ತಿದ್ದುಪಡಿ ವೇಳೆ ಕಾಯಿದೆಯ ಸೆಕ್ಷನ್ 2(1)(ಬಿ) ಗೆ ಹೊಸ ನಿಯಮಾವಳಿ ಸೇರಿಸಿದ್ದು ಆಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನಗಳ ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದೂ, ಸಿಖ್, ಬೌದ್ಧ,ಜೈನ, ಪಾರ್ಸಿ ಹಾಗೂ ಕ್ರೈಸ್ತ ಧರ್ಮಕ್ಕೆ ಸೇರಿದ ವ್ಯಕ್ತಿಗಳು ಮತ್ತು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯಿದೆ- ಅಥವಾ 1946ರ ವಿದೇಶಿಯರ ಕಾಯಿದೆಯಡಿ ಕೇಂದ್ರ ಸರ್ಕಾರದಿಂದ ವಿನಾಯಿತಿ ಪಡೆದವರನ್ನು “ಅಕ್ರಮ ವಲಸಿಗ” ಎಂದು ಪರಿಗಣಿಸಲಾಗುವುದಿಲ್ಲ. ಪರಿಣಾಮವಾಗಿ, ಅಂತಹ ವ್ಯಕ್ತಿಗಳು 1955ರ ಕಾಯಿದೆ ಅಡಿಯಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಹೇಳಿತ್ತು.
ಆದರೆ ಸಿಎಎ ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ಕಾಯಿದೆಯಿಂದ ಹೊರಗಿಟ್ಟಿದೆ ಎಂದು ದೇಶದೆಲ್ಲೆಡೆ ಪ್ರತಿಭಟನೆಗೆ ಕಾರಣವಾಗಿ ಅನೇಕ ಸಂಘಟನೆಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದವು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement