ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಇನ್ನೂ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭರ್ಜರಿ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಡಿ.3 ರಂದು ರಜೆ ಘೋಷಣೆ ಮಾಡಲಾಗಿದೆ. ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಕೊಡಗು ಹಾಗೂ ಕೋಲಾರ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಮುನ್ಸೂಚನೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರಂದು (ಮಂಗಳವಾರ) ರಜೆ ಘೋಷಿಸಿದೆ.
ಹವಾಮಾನ ಇಲಾಖೆಯ ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 3 ರಂದು (ಮಂಗಳವಾರ)ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಘೋಷಿಸಲಾಗಿದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜು (ಪದವಿ, ಸ್ನಾತಕೋತ್ತರ ಹೊರತು) ಗಳಿಗೆ ಡಿ.3ರ ಮಂಗಳವಾರ ರಜೆ ಘೋಷಿಸಲಾಗಿದೆ.
ನಿರಂತರ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಕೋಲಾರ ಜಿಲ್ಲೆಯಲ್ಲಿ ಮಂಗಳವಾರವೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿಯೂ ಮಂಗಳವಾರ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಚಾಮರಾಜ ನಗರದಲ್ಲಿ ಮಂಗಳವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ