ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿದ್ದನ್ನು ಪ್ರಶ್ನಿಸಿದ ಯತ್ನಾಳ ಅರ್ಜಿ ವಿಚಾರಣೆ ಜನವರಿ 5ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ.
ಅರ್ಜಿ ವಿಚಾರಣೆಯ ಆರಂಭದಲ್ಲಿ ಪೀಠವು ಅರ್ಜಿದಾರರು ಹೇಗೆ ಇದರಿಂದ ಬಾಧಿತರು ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು. ಅರ್ಜಿದಾರರ ವಾದಿಸಿದ ವೆಂಕಟೇಶ ದಳವಾಯಿ ಅವರು “ವೈಯಕ್ತಿಕವಾಗಿ ಬಾದಿತರಾಗದಿದ್ದರೂ ಯಾರು ಬೇಕಾದರೂ ಕ್ರಿಮಿನಲ್‌ ಕಾನೂನಿಗೆ ಚಾಲನೆ ನೀಡಬಹುದು” ಎಂದು ವಾದಿಸಿದರು. ಇದಕ್ಕೆ ಪೀಠವು ಸಹಮತ ವ್ಯಕ್ತಪಡಿಸಿತು.

ಅರ್ಜಿದಾರರ ಪರ ವಕೀಲರು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದ್ದು, ಈ ಎಲ್ಲಾ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಸಮಯ ನೀಡಬೇಕು ಎಂದು ಅಡ್ವೊಕೇಟ್ ಜನರಲ್ ಕೋರಿದರು. ಇದಕ್ಕೆ ಒಪ್ಪಿಗೆ ನೀಡಿದ ಹೈಕೋರ್ಟ್, 2024, ಜನವರಿ 5 ರಂದು ವಿಸ್ತೃತವಾದ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಆದಾಯ ತೆರಿಗೆ ಇಲಾಖೆ ದಾಳಿಗಳು ಮತ್ತು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದ ಮೇಲೆ, ಡಿ.ಕೆ. ಶಿವಕುಮಾರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಸಿಬಿಐ ಅನುಮತಿ ಕೋರಿತ್ತು ಮತ್ತು ಅದಕ್ಕೆ ಅಂದಿನ ಬಿಜೆಪಿ ಸರ್ಕಾರ ಸೆಪ್ಟೆಂಬರ್ 25, 2019 ರಂದು ಅನುಮತಿ ನೀಡಿತ್ತು.
ಸರ್ಕಾರ ಬದಲಾದ ನಂತರ, ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂತೆಗೆದುಕೊಂಡಿತು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement