ಕೋಲ್ಕತ್ತಾ: ಮುಂಬರುವ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರ ಹೊರಬಿದ್ದಿದೆ.
ಗುರುವಾರ (ಫೆಬ್ರವರಿ 5) ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಕಾಂಗ್ರೆಸ್ (ಪಿಸಿಸಿ) ಅಧ್ಯಕ್ಷ ಶುಭಾಂಕರ ಸರ್ಕಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ಪಶ್ಚಿಮ ಬಂಗಾಳದ ಮಾಜಿ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ಹಾಗೂ ಸಂಸದ ಇಶಾ ಖಾನ್ ಚೌಧರಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು.
ಸಭೆಯ ನಂತರ ಮಾತನಾಡಿದ ಗುಲಾಮ್ ಅಹ್ಮದ್ ಮಿರ್, “ಬಂಗಾಳ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ. ಎಡಪಕ್ಷಗಳಂತಹ ಮಿತ್ರಪಕ್ಷಗಳೊಂದಿಗಿನ ಮೈತ್ರಿಯು ನಮ್ಮ ಕಾರ್ಯಕರ್ತರ ಹುಮ್ಮಸ್ಸನ್ನು ಕುಂದಿಸಿತ್ತು. ತಳಮಟ್ಟದ ಕಾರ್ಯಕರ್ತರ ಆಶಯದಂತೆ ಎಲ್ಲಾ ಸೀಟುಗಳಲ್ಲಿ ಸ್ವಂತ ಬಲದ ಮೇಲೆ ಸ್ಪರ್ಧಿಸಲು ನಾಯಕರು ಸರ್ವಾನುಮತದಿಂದ ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.
ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಹೈಕಮಾಂಡ್ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದೆ. “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರೊಂದಿಗೆ ಸುದೀರ್ಘ ಚರ್ಚೆಯ ನಂತರ, 2026ರ ವಿಧಾನಸಭಾ ಚುನಾವಣೆಯನ್ನು ಒಂಟಿಯಾಗಿ ಎದುರಿಸಲು ನಿರ್ಧರಿಸಲಾಗಿದೆ. ಇದು ಬಂಗಾಳದ ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳಿಗೆ ಸಂದ ಗೌರವವಾಗಿದೆ,” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2021ರ ಸೋಲಿನ ಕಹಿ ನೆನಪು
2021ರ ಚುನಾವಣೆಯಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲಾಗದೆ ಮುಖಭಂಗ ಅನುಭವಿಸಿತ್ತು. ಆಗ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 213 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 77 ಸ್ಥಾನಗಳನ್ನು ಪಡೆದಿತ್ತು. ಅಂದು ಅನುಭವಿಸಿದ ಶೂನ್ಯ ಫಲಿತಾಂಶಕ್ಕೆ ಮೈತ್ರಿಯೇ ಕಾರಣ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಈ ಬಾರಿ ಏಕಾಂಗಿ ಹಾದಿ ಹಿಡಿದಿದೆ.
ಬಂಗಾಳದ ರಾಜಕೀಯ ಕಣದಲ್ಲಿ ಹೊಸ ತಂತ್ರ
ಟಿಎಂಸಿ ಮತ್ತು ಬಿಜೆಪಿಯಂತಹ ಬಲಿಷ್ಠ ಶಕ್ತಿಗಳ ನಡುವೆ ಕಾಂಗ್ರೆಸ್ ತನ್ನ ನೆಲೆ ಕಂಡುಕೊಳ್ಳಲು ಈ ತಂತ್ರ ರೂಪಿಸಿದೆ. ಇದು ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಮತ್ತು ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸುವ ಪ್ರಯತ್ನ ಎಂದು ವಿಶ್ಲೇಷಿಸಲಾಗಿದೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಲ್ಲಿ ಕಾಂಗ್ರೆಸ್ನ ಈ ‘ಏಕಾಂಗಿ ಹೋರಾಟದ’ ನಿರ್ಧಾರ ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.


ನಿಮ್ಮ ಕಾಮೆಂಟ್ ಬರೆಯಿರಿ