ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ತನಿಖೆ ನಡೆಸಲು ಸಿಐಡಿ ಪೊಲೀಸರು ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿರುವ ಬೆನ್ನಿಗೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಗೊಳಿಸುವಂತೆ ಅವರು ಕೋರಿದ್ದು, . ತಾನು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿದೆ. ಹೀಗಾಗಿ, ಅನಗತ್ಯ ದೂರು ನೀಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಎಫ್ಐಆರ್ ದಾಖಲಾದ ನಂತರ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೇನೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದಾರೆ. ದೂರಿನಲ್ಲಿ ಯಾವುದೇ ಅಪರಾಧದ ಅಂಶಗಳಿಲ್ಲದಿರುವುದರಿಂದ ತಮ್ಮ ವಿರುದ್ಧದ ಎಫ್ಐಆರ್ ರದ್ದು ಪಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ ಏನು..?
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಳೆದ ಮಾರ್ಚ್ 14ರಂದು ನೀಡಲಾಗಿದ್ದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ನಂತರ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣ ಕೈಗೆತ್ತಿಕೊಂಡಿರುವ ಸಿಐಡಿ ತನಿಖಾಧಿಕಾರಿಗಳು ಈಗ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ವಿಚಾರಣೆಗೆ ಬರಬೇಕಿದೆ
ನಿಮ್ಮ ಕಾಮೆಂಟ್ ಬರೆಯಿರಿ