ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿ ಕೆಲವು ಕೋಮುಗಲಭೆ ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ ನೀಡಿದೆ.
2026ರ ಮೇ 27ರಂದು ರಾಜ್ಯ ಗೃಹ ಇಲಾಖೆಯು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರಿಗೆ ಆದೇಶಿಸಿದ್ದನ್ನು ಪ್ರಶ್ನಿಸಿ ವಕೀಲ ಗಿರೀಶ ಭಾರದ್ವಾಜ ಅವರು ಸಲ್ಲಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ ವಿಭಾಗೀಯ ಪೀಠವು ಇದಕ್ಕೆ ತಡೆ ನೀಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ವೆಂಕಟೇಶ ದಳವಾಯಿ, ಮೂವರು ಹಿರಿಯ ಸಚಿವರ ಶಿಫಾರಸ್ಸಿನ ಅನ್ವಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪ್ರಾಸಿಕ್ಯೂಷನ್ ಹಿಂಪಡೆದಿದೆ. ಈ ಸಂಬಂಧ 2025ರಲ್ಲಿ ಇದೇ ನ್ಯಾಯಾಲಯ ಹೊರಡಿಸಿರುವ ಆದೇಶಕ್ಕೆ ವಿರುದ್ಧವಾದ ನಿಲುವನ್ನು ಸರ್ಕಾರ ತಳೆದಿದೆ. ಇದಕ್ಕೆ ತಡೆ ನೀಡಬೇಕು” ಎಂದು ಪೀಠವನ್ನು ಕೋರಿದರು. ಹೆಚ್ಚುವರಿ ಅಡ್ವೊಕೇಟ್ ಜನರಲ್ ತಾರಾನಾಥ ಪೂಜಾರಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಪೀಠವು ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸಮಯ ನೀಡಲಾಗುವುದು. ಗೃಹ ಇಲಾಖೆ ಮತ್ತು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ವಿಚಾರಣೆವರೆಗೆ ಪ್ರಕರಣಗಳನ್ನು ಹಿಂಪಡೆದಿರುವ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಹೇಳಿ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ವಿಚಾರಣೆ ಮುಂದೂಡಿತು.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ ಕೆಲವು ಕೋಮುಗಲಭೆ ಪ್ರಕರಣಗಳು ಸೇರಿದಂತೆ ಹಲವು ರಾಜಕಾರಣಿಗಳು, ರೈತಪರ, ಕನ್ನಡಪರ ಹಾಗೂ ಇತರ ಹೋರಾಟಗಾರರ ವಿರುದ್ಧದ 52 ಪ್ರಕರಣಗಳನ್ನು 2026 ಮೇ 27ರಂದು ರಾಜ್ಯ ಸರ್ಕಾರ ಹಿಂಪಡೆದಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ