ಬೆಂಗಳೂರು : ಬಿಜೆಪಿ- ಜೆಡಿಎಸ್ ಪಕ್ಷಗಳು ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಗಳವಾರ (ಅಕ್ಟೋಬರ್ 21) ಭೇಟಿ ಮಾಡಿದ ಅವರು, ದೀಪಾವಳಿ ಹಬ್ಬದ ಶುಭಾಶಯ ಕೋರಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆದಿದೆ. 8-10 ದಿನಗಳಲ್ಲಿ ಕುಮಾರಸ್ವಾಮಿ ಅವರು ಹೆಸರುಗಳನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಮಾಡುವ ಬಗ್ಗೆ ಹಾಗೂ ರಾಜ್ಯಕ್ಕೆ ಸಂಬಂಧಿಸಿ ಮತ್ತೊಂದು ಸಮನ್ವಯ ಸಮಿತಿ ಮಾಡುವ ಬಗ್ಗೆ ಕುಮಾರಸ್ವಾಮಿ ಅವರು ಸಲಹೆ ನೀಡಿದ್ದಾರೆ ನೀಡಿದ್ದಾರೆ ಎಂದು ತಿಳಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತ ವಿಫಲವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ. ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬೆಂಗಳೂರು ಮಹಾನಗರದ ಅವ್ಯವಸ್ಥೆಯನ್ನು ನೋಡುತ್ತಿದ್ದೇವೆ ಎಂದರು.
ಸಚಿವರು ಅಹಂಕಾರದಿಂದ ಮೆರೆಯುತ್ತಿದ್ದಾರೆ. ಮೋಹನದಾಸ್ ಪೈ, ಕಿರಣ ಮಜುಂದಾರ್ ಷಾ ಅವರಂಥ ಹಿರಿಯರು ಉದ್ಯಮಿಗಳು ಬೆಂಗಳೂರಿನ ಬಗ್ಗೆ ಮತ್ತು ರಸ್ತೆಗಳ ಕುರಿತು ಸಲಹೆ ನೀಡಿದರೆ, ಆ ಸಲಹೆಗಳನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ; ಅಂಥವರನ್ನು ಸ್ವತಃ ಸಚಿವರೇ ನಿಂದಿಸುತ್ತಿದ್ದಾರೆ; ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ವಿಜಯೇಂದ್ರ ಆಕ್ಷೇಪಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ