ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಪ್ರದೇಶದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ನೀರು ಏಕಾಏಕಿ ನುಗ್ಗಿದ ಪರಿಣಾಮ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಈ ಘಟನೆ ಗುರುವಾರ ಸಂಜೆ ನಡೆದಿದೆ.ಗುರುವಾರ ಸಂಜೆ ಸುಮಾರು 6:30ರಿಂದ 6:45ರ ನಡುವಿನ ಅವಧಿಯಲ್ಲಿ ಹಿಂದೂಸ್ತಾನ್ ಕನ್ಸ್ಟ್ರಕ್ಷನ್ ಕಂಪನಿ (HCC) ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಸುರಂಗದೊಳಗೆ ಏಕಾಏಕಿ ಭಾರೀ ಪ್ರಮಾಣದ ನೀರು ಮತ್ತು ಮಣ್ಣು ನುಗ್ಗಿವೆ. ಪರಿಣಾಮ ಸುರಂಗದೊಳಗೆ ಕನಿಷ್ಠ 22 ಮಂದಿ ಸಿಲುಕಿಕೊಂಡಿದ್ದು, ತಕ್ಷಣವೇ ಭಾರೀ ಪ್ರಮಾಣದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಹಾಗೂ ಸ್ಥಳೀಯ ಆಡಳಿತದ ಸಿಬ್ಬಂದಿ ಭಾಗವಹಿಸಿದರು. ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಭಾರತೀಯ ಸೇನೆ ಮತ್ತು ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ITBP) ತಂಡಗಳನ್ನೂ ಕಾರ್ಯಾಚರಣೆಗೆ ನಿಯೋಜಿಸಲಾಯಿತು.
ಸುರಂಗದಲ್ಲಿ ಸಿಲುಕಿದ್ದ 22 ಮಂದಿಯ ಪೈಕಿ 19 ಮಂದಿಯನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಒಟ್ಟು 19 ಮಂದಿಯನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಅವರಲ್ಲಿ ಏಳು ಮಂದಿಯನ್ನು ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಉಳಿದ 13 ಮಂದಿ ತುಸು ಸ್ಥಿರ ಸ್ಥಿತಿಯಲ್ಲಿದ್ದು, 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ. ಆಯುಷ್ ತಿಳಿಸಿದ್ದಾರೆ.
ಇನ್ನೂ ಮೂವರು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ. ಅಗತ್ಯವಿದ್ದರೆ ಹೆಚ್ಚುವರಿ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ನಿಯೋಜಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಮೋಲಿ ಜಿಲ್ಲಾಧಿಕಾರಿ ಗೌರವಕುಮಾರ ಹಾಗೂ ಎನ್ಡಿಆರ್ಎಫ್ (NDRF) ಅಧಿಕಾರಿ ಅಮೃತಲಾಲ ಮೀನಾ ಸ್ಥಳದಲ್ಲೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಕುರಿತು ಎನ್ಡಿಆರ್ಎಫ್ (NDRF) ಅಧಿಕಾರಿ ಅಮೃತಲಾಲ ಮೀನಾ ಮಾತನಾಡಿ, ತಮ್ಮ ತಂಡ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ ಬಳಿಕ ಸುರಂಗದೊಳಗೆ ಭಾರೀ ಪ್ರಮಾಣದ ನೀರು ಇರುವುದನ್ನು ಗಮನಿಸಲಾಗಿದೆ. ಅಂದಿನಿಂದ ಸುರಂಗದಲ್ಲಿನ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಘಟನೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆಯಲು ಸಂಬಂಧಿಸಿದ ಎಲ್ಲ ಇಲಾಖೆಗಳು ಹಾಗೂ ರಕ್ಷಣಾ ಸಂಸ್ಥೆಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ