ನವದೆಹಲಿ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜಕೀಯ ಹಿನ್ನಡೆಯಾಗಿದೆ. ಪಕ್ಷದ ಬಂಡಾಯ ನಾಯಕರಾದ ಕುನ್ವರ್ ವಿಜಯ ಪ್ರತಾಪ, ಹರ್ಮೀತ್ ಸಿಂಗ್ ಪಠಾಣ್ಮಜ್ರಾ ಮತ್ತು ಚೇತನ ಸಿಂಗ್ ಜೌರಮಾಜ್ರಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ಮೂವರನ್ನೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಎಪಿ ಅಮಾನತುಗೊಳಿಸಿತ್ತು. ಪಕ್ಷದಿಂದ ಅಮಾನತುಗೊಂಡಿದ್ದ ಶಾಸಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯಪ್ರತಾಪ ಸಿಂಗ್ ಸೋಮವಾರ ಬೆಳಗ್ಗೆ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಇದಾದ ಕೆಲವೇ ಗಂಟೆಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾದರು. ಭಾನುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಇತರ ಇಬ್ಬರು ಅಮಾನತುಗೊಂಡ ಶಾಸಕರೂ ಅವರೊಂದಿಗೆ ಬಿಜೆಪಿ ಸೇರಿದ್ದು, ಮೂವರು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
2027ರ ಆರಂಭದಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಮುನ್ನ ಎಎಪಿ ರಾಜಕೀಯ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಈ ರಾಜೀನಾಮೆಗಳು ಮಹತ್ವ ಪಡೆದಿವೆ.
ಅಮೃತಸರ ಉತ್ತರ ಕ್ಷೇತ್ರದ ಶಾಸಕ ಕುನ್ವರ್ ವಿಜಯ ಪ್ರತಾಪ ಸಿಂಗ್, ಪಟಿಯಾಲ ಜಿಲ್ಲೆಯ ಸಮನಾ ಕ್ಷೇತ್ರದ ಶಾಸಕ ಚೇತನ್ ಸಿಂಗ್ ಜೌರಮಾಜ್ರಾ ಹಾಗೂ ಸನೌರ್ ಕ್ಷೇತ್ರದ ಶಾಸಕ ಹರ್ಮೀತ್ ಸಿಂಗ್ ಪಠಾಣ್ಮಜ್ರಾ ಅವರು ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕಾಗಿ ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿದರು.
ಬಿಜೆಪಿಯ ಸದಸ್ಯತ್ವ ಪಡೆಯುವ ಔಪಚಾರಿಕ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮೂವರೂ ನಾಯಕರು ಈ ಮೂವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
40 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದ ಎಎಪಿ
2027ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಎಎಪಿ, ಶನಿವಾರ ತನ್ನ 40 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿರುವ ಬೆನ್ನಲ್ಲೇ ಪಕ್ಷದ ಮೂವರು ಪ್ರಮುಖ ಬಂಡಾಯ ನಾಯಕರು ಬಿಜೆಪಿ ಸೇರ್ಪಡೆಯಾಗಿರುವುದು ಪಂಜಾಬ್ ರಾಜಕೀಯದಲ್ಲಿ ಗಮನ ಸೆಳೆದಿದೆ.


ನಿಮ್ಮ ಕಾಮೆಂಟ್ ಬರೆಯಿರಿ