
ಬೆಂಗಳೂರು : ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಶೀತಗಾಳಿಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇದು ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೆ, ಉಳಿದ ಜಿಲ್ಲೆಗಳಲ್ಲಿಯೂ ಚಳಿ ಹೆಚ್ಚಾಗುವ ಸಾಧ್ಯತೆಯಿದೆ.
ತೀವ್ರ ಚಳಿಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ಉತ್ತರ ಕರ್ನಾಟಕದ ಕಲಬುರಗಿ, ಬೀದರ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೇಂಜ್ ಟಲರ್ಟ್ ನೀಡಿದೆ. ಮುಂದಿನ ದಿನಗಳಲ್ಲಿ ಶೀತಗಾಳಿ ಮುಂದುವರೆಯಲಿದ್ದು, ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 6-7°C ಗೆ ಇಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಎರಡನೆಯ ಬಾರಿಗೆ ತಾಪಮಾನ ಇಷ್ಟು ಕನಿಷ್ಠ ಮಟ್ಟ ತಲುಪಿದೆ. 2023ರಲ್ಲಿ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಎರಡೂ ದಿನಗಳ ಕಾಲ ಶೀತಗಾಳಿ ಬೀಸುವ ಸಾದ್ಯತೆ ಇರುವುದರಿಂದ ವಿಜಯಪುರದಲ್ಲಿ ತಾಪಮಾನ 6 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಉತ್ತರ ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಸಾಮಾನ್ಯಕ್ಕಿಂತ 6-8 ಡಿಗ್ರಿ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ.
ವಿಜಯಪುರದಲ್ಲಿ ಕೇವಲ 7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾದರೆ, ಬೀದರಿನಲ್ಲಿ 7.4 ಡಿಗ್ರಿ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 8.2 ಡಿಗ್ರಿ ತಾಪಮಾನ ದಾಖಲಾಗಿದೆ. ಇನ್ನು ಧಾರವಾಡ 8.5 ಡಿಗ್ರಿ, ರಾಯಚೂರು 9 ಡಿಗ್ರಿ ಮತ್ತು ಗದಗ 9.8 ಡಿಗ್ರಿ ತಾಪಮಾನ ದಾಖಲಿಸಿವೆ. ಶೀತಗಾಳಿ ಬೀಸಿದರೆ ತಾಪಮಾನ ಮತ್ತಷ್ಟು ಕುಸಿಯುವ ಭೀತಿಯಿದೆ.
ಬೆಂಗಳೂರು ನಗರದಲ್ಲಿಯೂ ಮೈ ಕೊರೆಯುವ ಚಳಿ ಮುಂದುವರಿದಿದ್ದು,ಶೀತ ಗಾಳಿ ಬೀಸುತ್ತಿದೆ. ಕನಿಷ್ಠ ತಾಪಮಾನ 14 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ವಿಶೇಷವಾಗಿ ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ರಾಜ್ಯಾದ್ಯಂತ ಚಳಿ ಹಾಗೂ ಶೀತಗಾಳಿಯಿಂದಾಗಿ ಬೆಳಗ್ಗೆ ವಾಕಿಂಗ್‌ಗೆ ಹೋಗಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ