ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದ್ದು, ಅದು ನವೆಂಬರ್ 2ರಂದು ಆಂಧ್ರಪ್ರದೇಶದ ಕರಾವಳಿಗೆ ತಲುಪುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದರ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ 5ರವರೆಗೆ ಗುಡುಗು ಸಹಿತ ಮಳೆಯಾಗುವ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಅಲ್ಲದೆ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ನವೆಂಬರ್ 2ರಿಂದ 5ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಅಕ್ಟೋಬರ್ 31ರ ಹವಾಮಾನ ವರದಿಯ ಪ್ರಕಾರ, ಆಗ್ನೇಯ ಬಂಗಾಳಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪಕ್ಕದ ಪ್ರದೇಶ ಹಾಗೂ ಅಂಡಮಾನ್ ಸಮುದ್ರದ ಮೇಲ್ಭಾಗದಲ್ಲಿ ಗುರುತಿಸಲಾಗಿರುವ ವಾಯುಭಾರ ಕುಸಿತವು ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಈ ವಾಯುಭಾರ ಕುಸಿತಕ್ಕೆ ಸಂಬಂಧಿಸಿದ ಮೇಲ್ಮೈ ಸುಳಿಗಾಳಿಯು ಸಮುದ್ರ ಮಟ್ಟದಿಂದ 7.6 ಕಿ.ಮೀ. ಎತ್ತರದವರೆಗೆ ವ್ಯಾಪಿಸಿದೆ.
ಈ ಹವಾಮಾನ ವ್ಯವಸ್ಥೆಯು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿ, ಅದೇ ಪ್ರದೇಶದಲ್ಲಿ ಮತ್ತಷ್ಟು ತೀವ್ರಗೊಂಡು ಡಿಪ್ರೆಶನ್ (Depression) ಆಗಿ ರೂಪುಗೊಳ್ಳುವ ಸಾಧ್ಯತೆಯಿದೆ. ನಂತರದ 24 ಗಂಟೆಗಳಲ್ಲಿ ಮತ್ತಷ್ಟು ಬಲಗೊಂಡು ಚಂಡಮಾರುತವಾಗಿ ಪರಿವರ್ತನೆಯಾಗುವ ನಿರೀಕ್ಷೆಯಿದೆ. ಚಂಡಮಾರುತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿ, ನವೆಂಬರ್ 2ರ ಸಂಜೆ ವೇಳೆಗೆ ಆಂಧ್ರಪ್ರದೇಶದ ಕರಾವಳಿಯ ಸಮೀಪವಿರುವ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲೂ ಮೇಲ್ಮೈ ಸುಳಿಗಾಳಿ
ಕೇರಳ ಮತ್ತು ಕರ್ನಾಟಕ ಕರಾವಳಿಯ ಸಮೀಪದ ಆಗ್ನೇಯ ಅರಬ್ಬಿ ಸಮುದ್ರದಿಂದ ದಕ್ಷಿಣ ಮಹಾರಾಷ್ಟ್ರದ ಕರಾವಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಮೇಲ್ಮೈ ಸುಳಿಗಾಳಿಯವರೆಗೆ ಟ್ರಫ್ (ವಾಯುಭಾರ ಕುಸಿತದ ಉದ್ದನೆಯ ವಲಯ) ನಿರ್ಮಾಣವಾಗಿದೆ. ಇದು ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದಲ್ಲಿದೆ.
ಇದೇ ವೇಳೆ, ಮಹಾರಾಷ್ಟ್ರ ಕರಾವಳಿಯ ಸಮೀಪದ ಪೂರ್ವ-ಮಧ್ಯ ಅರಬ್ಬಿ ಸಮುದ್ರದಿಂದ ಆಗ್ನೇಯ ಉತ್ತರ ಪ್ರದೇಶದ ವಾಯುಭಾರ ಕುಸಿತಕ್ಕೆ ಸಂಬಂಧಿಸಿದ ಮೇಲ್ಮೈ ಸುಳಿಗಾಳಿಯವರೆಗೆ ವಿಸ್ತರಿಸಿದ್ದ ಮತ್ತೊಂದು ಟ್ರಫ್ ದುರ್ಬಲಗೊಂಡಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 1.5 ಕಿ.ಮೀ. ಎತ್ತರದಲ್ಲಿ ಕಂಡುಬಂದಿದ್ದ ಮೇಲ್ಮೈ ಸುಳಿಗಾಳಿಯೂ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ನವೆಂಬರ್ 1ರಿಂದ 4ರವರೆಗೆ ಕರ್ನಾಟಕದ ಒಳನಾಡಿನ ಹಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದೇ ಅವಧಿಯಲ್ಲಿ ಕರಾವಳಿ ಕರ್ನಾಟಕದಲ್ಲಿ ನವೆಂಬರ್ 1ರಿಂದ 3ರವರೆಗೆ ಹಾಗೂ ಒಳನಾಡು ಕರ್ನಾಟಕದಲ್ಲಿ ನವೆಂಬರ್ 1ರಿಂದ 4ರವರೆಗೆ ಅಲ್ಲಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಯಾವ ಭಾಗದಲ್ಲಿ ಯಾವಾಗ ಭಾರಿ ಮಳೆ?
ಕರಾವಳಿ ಕರ್ನಾಟಕದಲ್ಲಿ ನವೆಂಬರ್ 3ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಕರ್ನಾಟಕದಲ್ಲೂ ನವೆಂಬರ್ 3ರಂದು ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿ ನವೆಂಬರ್ 2ರಿಂದ 5ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಹೊಸ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹವಾಮಾನದಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಸತತ ನಾಲ್ಕು ದಿನಗಳ ಕಾಲ ಮಳೆಯ ಮುನ್ಸೂಚನೆ ಇರುವುದರಿಂದ ನವೆಂಬರ್ ಮೊದಲ ವಾರದಲ್ಲಿ ಹವಾಮಾನ ಪರಿಸ್ಥಿತಿಯ ಮೇಲೆ ನಿಗಾ ಇರಿಸುವ ಅಗತ್ಯವಿದೆ.
ನವೆಂಬರ್ 1ರ ಮಳೆ ಮುನ್ಸೂಚನೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 2ರ ಮಳೆ ಮುನ್ಸೂಚನೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವುದರೊಂದಿಗೆ ಭಾರಿ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 3ರ ಮಳೆ ಮುನ್ಸೂಚನೆ
ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 4 ಹಾಗೂ 5ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ನವೆಂಬರ್ 4 ಹಾಗೂ 5ರಂದು ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ