ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ, ಉಳುವರೆಗೆ ಸಂಸದ ಕಾಗೇರಿ ಭೇಟಿ : ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ ಮತ್ತು ಘಟನೆಯಿಂದಾಗಿ ಹಾನಿ ಸಂಭವಿಸಿದ ಉಳುವರೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ರಕ್ಷಣಾ ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರೊಂದಿಗೆ ಚರ್ಚೆ ನಡೆಸಿದ ಸಂಸದರು ದುರ್ಘಟನೆಯಲ್ಲಿ ನಾಪತ್ತೆ ಆಗಿರುವ ಸ್ಥಳೀಯ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಜೊತೆಗೆ ಕೇರಳದ ಲಾರಿ ಚಾಲಕ ಅರ್ಜುನ್ ಅವರನ್ನು ಶೀಘ್ರ ಪತ್ತೆಗೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಕಣ್ಮರೆಯಾದ ಜಗನ್ನಾಥ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದ ಕಾಗೇರಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶಿರೂರು ಮತ್ತು ಉಳುವರೆ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಸಂತ್ರಸ್ತರೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದುರಂತ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಎಲ್ಲ ಮಾಹಿತಿ ಪಡೆಯಲಾಗಿದೆ, ರಕ್ಷಣಾ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಸೇನಾ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
ದುರ್ಘಟನೆಯಲ್ಲಿ ಜೀವ ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ನೀಡುವ ಜೊತೆಗೆ ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಜನರಿಗೆ ಶಾಸ್ವತ ಪರಿಹಾರ ಒದಗಿಸುವ ದಿಶೆಯಲ್ಲಿ ಸರ್ಕಾರ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಸಂಸದ ಕಾಗೇರಿ ಅವರೊಂದಿಗೆ ಚರ್ಚೆ ನಡೆಸಿ ಮೇಲಿಂದ ಮೇಲೆ ಸಂಭವಿಸುತ್ತಿರುವ ಪೃಕೃತಿ ವಿಕೋಪದಿಂದ ಗಂಗಾವಳಿ ನದಿಯ ತಟದಲ್ಲಿ ವಾಸಿಸುವ ಜನರಿಗೆ ಜೀವನ ನಡೆಸುವುದು ಕಷ್ಟಕರವಾಗಿದ್ದು ಕಂದಾಯ ಇಲಾಖೆಯಿಂದ ಜಾಗಗಳನ್ನು ಗುರುತಿಸಿ ಅವರಿಗೆ ಶಾಶ್ವತವಾಗಿ ಪರಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮನೆ ನಿರ್ಮಾಣ ಮಾಡಿ ಕೊಡಬೇಕಿದೆ ಎಂದರು.
ಕುಮಟಾ ಶಾಸಕ ದಿನಕರ ಶೆಟ್ಟಿ, ಬಿಜೆಪಿ ಪ್ರಮುಖರಾದ ಗೋಪಾಲಕೃಷ್ಣ ವೈದ್ಯ, ಸಂಜಯ ನಾಯ್ಕ, ಭಾಸ್ಕರ ನಾರ್ವೇಕರ ಮೊದಲಾದವರಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement