ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ವೈರಸ್ ಪ್ರಕರಣಗಳು ಕಾಣಿಸಿಕೊಂಡ ನಂತರ ಎಚ್ಚೆತ್ತುಕೊಂಡ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಸಭೆಯ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಓಮಿಕ್ರಾನ್ ವೈರಸ್ ಸೋಂಕು ಹಾಗೂ ಶಾಲಾ- ಕಾಲೇಜುಗಳಲ್ಲೂ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಜ್ಞರ ಜೊತೆ ಸಭೆ ನಡೆಯಲಿದೆ.
ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಬಗ್ಗೆ ಇಂದು ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಪ್ರಕಟ ಮಾಡುವ ಸಾಧ್ಯತೆಯೂ ಇದೆ. ಹೀಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ