ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಎಲ್ಲ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ ನೀಡಿದ್ದು, ನಾಗರಿಕ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಸೋಮವಾರ (ಸೆಪ್ಟೆಂಬರ್‌ 29) ಅಧಿಕೃತ ಆದೇಶ ಹೊರಡಿಸಿದೆ. ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.
ಇತ್ತೀಚೆಗೆ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು 5 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್ಸಟೇಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಉದ್ಯೋಗಕ್ಕೆ ಕಾಯುತ್ತಿರುವವರ ಸಂಖ್ಯೆ ದೊಡ್ಡದಿದೆ. ಅದಕ್ಕಾಗಿ ಹಗಲು ರಾತ್ರಿಯೆನ್ನದೆ ಓದುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಹಲವು ವರ್ಷಗಳಿಂದ ನೇಮಕ ಮಾಡುತ್ತಿಲ್ಲ. ಹೀಗಾಗಿ ಸಹಜವಾಗಿಯೇ ನಮ್ಮ ವಯಸ್ಸು ಹೆಚ್ಚಾಗುತ್ತಿದೆ. ವಯಸ್ಸು ಹೆಚ್ಚಾದರೆ ಮುಂದೆ ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರದ ಉದ್ಯೋಗ ಸಂಬಂಧ ನಡೆಸುವ ಎಲ್ಲಾ ಪರೀಕ್ಷೆಗಳ ವಯೋಮಿತಿ ಸಡಿಲಿಕೆ ಮಾಡಬೇಕು ಎಂದು ಆಗ್ರಹ ಮಾಡಿದ್ದರು. ನಂತರದಲ್ಲಿ ಹಲವಾರು ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು ರಾಜ್ಯ ನಾಗರಿಕ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಗಳನ್ನು ಸರ್ಕಾರ ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ ಆದೇಶಿಸಿದೆ.
ಸೆಪ್ಟೆಂಬರ್‌ 6ರಂದು ರಾಜ್ಯ ಸರ್ಕಾರ ನಾಗರಿಕ ಹುದ್ದೆಗಳ ನೇರ ನೇಮಕಾತಿಗಳಿಗೆ 2 ವರ್ಷ ಸಡಿಲಿಕೆ ಮಾಡಿ ಆದೇಶಿಸಿತ್ತು. ಈಗ 06.09.2025ರ ಆದೇಶವನ್ನು ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳ ಅನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement