ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಹಾಸನ : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಾದ ಎಸ್​ಐಟಿ ತನಿಖೆ ಚುರುಕುಗೊಂಡಿದ್ದು, ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಸ್‌ ಜಾರಿ ಮಾಡಿದೆ. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಏಳು ದಿನ ಕಾಲಾವಕಾಶ ಬೇಕು ಎಂದು ಪ್ರಜ್ವಲ್​ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಸಮಯ ಕೋರಿ ಪತ್ರ ಬರೆದಿದ್ದಾರೆ.
ಪ್ರಜ್ವಲ್‌ ರೇವಣ್ಣ ಪರ ವಕೀಲ ಅರುಣ್‌ ಜಿ ಅವರು ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದಾರೆ.

ವಕೀಲರಾದ ಜಿ. ಅರುಣ್ ಮೂಲಕ ಎಸ್​ಐಟಿ ಮುಖ್ಯಸ್ಥರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಸಿಆರ್​ಪಿಸಿ 41(a) ಅಡಿ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೊಟೀಸ್ ನೀಡಿತ್ತು. ಅವರು ಖುದ್ದು ಹಾಜರಾಗಿ ಹೇಳಿಕೆ ನೀಡಲು ಏಳು ದಿನ ಸಮಯಾವಕಾಶ ನೀಡಿ ಎಂದು ವಕೀಲರು ಸಮಯ ಕೋರಿದ್ದಾರೆ.

ಪ್ರಜ್ವಲ್‌ ವಕೀಲರ ಪತ್ರದಲ್ಲೇನಿದೆ.
ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದೀರಿ. ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ.
ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ವಕೀಲರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

ಈ ಮಧ್ಯೆ ಎಸ್‌ಐಟಿ ನೋಟಿಸ್ ವಿಚಾರವಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಹೆಚ್​.ಡಿ.ರೇವಣ್ಣ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಎಸ್‌ಐಟಿ ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್​ ಅಂಟಿಸಿದ್ದಾರೆ. ನೋಟಿಸ್​ನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳುತ್ತೇನೆ. ಎಲ್ಲವನ್ನೂ ಕಾನೂನು ಪ್ರಕಾರವೇ ಎದುರಿಸುತ್ತೇನೆ ಎಂದು ಹೇಳಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement