ಬೆಂಗಳೂರು: ಬೀದರ ಮತ್ತು ಶಿವಮೊಗ್ಗದಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಸಿಇಟಿ (CET 2025) ವೇಳೆ ಜನಿವಾರ ತೆಗೆಸಿದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ ಪರೀಕ್ಷೆ ವಂಚಿತ ವಿದ್ಯಾರ್ಥಿಗೆ ಮರು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಪರೀಕ್ಷೆ ವಂಚಿತ ಬೀದರ ವಿದ್ಯಾರ್ಥಿಗೆ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಲೋಪಗಳಾಗದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿತ್ತು. ಆದರೆ, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯದ ಕಾರಣ ಪರೀಕ್ಷೆಗೆ ಅನುಮತಿ ನೀಡದಿರುವುದು ಖಂಡನೀಯ. ಎಲ್ಲಾ ಸಂಪ್ರದಾಯಗಳನ್ನು ನಾವು ಗೌರವಿಸಬೇಕು. ಈ ನಡೆಯನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಈಗಾಗಲೇ ವರದಿ ಕಳುಹಿಸುವಂತೆ ಸೂಚಿಸಲಾಗಿದೆ. ಬೀದರ ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ವಿದ್ಯಾರ್ಥಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ