ಬೆಳಗಾವಿ: ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಚವಾಟಗಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಮನೆಯಲ್ಲಿದ್ದ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ಬೆಂಕಿ ಆವರಿಸಿ ಮನೆಯೊಳಗಿದ್ದವರು ಬೆಂಕಿಯಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಗ್ನಿ ಅವಘಡದಲ್ಲಿ ರೋಷನ್ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.


ನಿಮ್ಮ ಕಾಮೆಂಟ್ ಬರೆಯಿರಿ