ನವದೆಹಲಿ: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಕೆ ವೈ ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಹಾಗೂ ಮರು ಮತಎಣಿಕೆ ನಡೆಸುವಂತೆ ಸೂಚಿಸಿದೆ. ಆದರೆ ಮರು ಮತ ಎಣಿಕೆಯ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನಂಜೇಗೌಡ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವರ ಪೀಠ ವಿಚಾರಣೆ ನಡೆಸಿತು.
ಮತ ಎಣಿಕೆ ಫಲಿತಾಂಶ ಬರುವವರೆಗೂ ನಂಜೇಗೌಡ ಅವರ ಶಾಸಕ ಸ್ಥಾನ ಅಬಾಧಿತ ಎಂದು ಹೇಳಿರುವ ಪೀಠವು ಪ್ರಕರಣವನ್ನು ನಾಲ್ಕು ವಾರದ ಬಳಿಕ ಆಲಿಸುವುದಾಗಿ ತಿಳಿಸಿದೆ.
ನಂಜೇಗೌಡ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಕೋರಿ 248 ಮತಗಳಿಂದ ಪರಾಜಿತರಾಗಿದ್ದ ಬಿಜೆಪಿಯ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ದೇವದಾಸ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೆಪ್ಟೆಂಬರ್ನಲ್ಲಿ ಪುರಸ್ಕರಿಸಿತ್ತು.
ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಅದು ಸೂಚಿಸಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ನಂಜೇಗೌಡ ಅವರು ಪ್ರಶ್ನಿಸಲು ಅನುವಾಗುವಂತೆ ಒಂದು ತಿಂಗಳ ಮಟ್ಟಿಗೆ ಆದೇಶಕ್ಕೆ ತಡೆ ನೀಡಿತ್ತು. ಅಂತೆಯೇ ನಂಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ