ಸಿ.ಪಿ.ಯೋಗೇಶ್ವರ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ : ಲಾಠಿ ಪ್ರಹಾರ

ಚನ್ನಪಟ್ಟಣ: ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರ ಕಾರಿನ ಮೇಲೆ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆಸಿದ ಘಟನೆನಂತರ ಬೊಂಬೆ ನಗರಿ ಚನ್ನಪಟ್ಟಣ ಉದ್ವಿಗ್ನಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ 50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಗುದ್ದಲಿ ಪೂಜೆ ನೆರವೇರಿಸಲು ಬಿಜೆಪಿ ಎಂಎಲ್‍ಸಿ ಯೋಗೇಶ್ವರ್ ಅವರು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಯೋಗೇಶ್ವರ ತಾಲೂಕಿನ ರಾಮಪುರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸುತ್ತಿದ್ದಾಗೆ ಜೆಡಿಎಸ್ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಪ್ರತಿಭಟನೆ ನಡೆಸಿದರು. ನಂತರ ಯೋಗೇಶ್ವರ ಅವರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಬೈರಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲು ಮುಂದಾದಾಗಲೂ ಜೆಡಿಎಸ್ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.ಆಗ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹಲವು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಜೆಡಿಎಸ್ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ವಿಷಯ ತಿಳಿಯುತ್ತಿದ್ದಂತೆ ನೂರಾರು ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದರು. ಪೊಲೀಸರ ಬೆಂಗಾವಲಿನಲ್ಲಿ ಕಾರ್ಯಕ್ರಮ ಮುಗಿಸಿ ಯೋಗೇಶ್ವರ ವಾಪಸ್ಸಾಗಲು ಮುಂದಾದಾಗ ಜೆಡಿಎಸ್ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದು ನಂತರ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಪೊಲೀಸರು ಉದ್ರಿಕ್ತ ಗುಂಪಿನ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಬೀಡುಬಿಟ್ಟಿದ್ದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ತಳ್ಳು-ನೂಕಾಟದ ವೇಳೆ ಜೆಡಿಎಸ್‍ನ ಮುಖಂಡರೊಬ್ಬರ ಕೈ ಮುರಿದಿದೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಮೂವರು ಡಿವೈಎಸ್‍ಪಿ, 15 ಮಂದಿ ಸರ್ಕಲ್ ಇನ್ಸ್‍ಪೆಕ್ಟರ್, 50ಕ್ಕೂ ಹೆಚ್ಚು ಸಬ್‍ಇನ್ಸ್‍ಪೆಕ್ಟರ್‍ಗಳು ಹಾಗೂ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಪ್ರಮುಖ ಸುದ್ದಿ :-   ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

ಯೋಗೇಶ್ವರ ಆಕ್ರೋಶ;
ಘಟನೆ ಕುರಿತಂತೆ ಮಾತನಾಡಿದ ಯೋಗೇಶ್ವರ ಅವರು, ಇದು ಸರ್ಕಾರದ ಕಾರ್ಯಕ್ರಮ, ಶಾಸಕರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ಪತ್ರಿಕೆ ನೀಡಿದ್ದೇವೆ. ಅವರು ಕಾರ್ಯಕ್ರಮಕ್ಕೆ ಬಂದಿಲ್ಲ. ಅಭಿವೃದ್ಧಿ ಸಹಿಸಲಾರದೆ ಜೆಡಿಎಸ್ ಕಾರ್ಯಕರ್ತರ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಹತಾಶ ಮನೋಭಾವದಿಂದ ಕುಮಾರಸ್ವಾಮಿ ಅವರು ಈ ರೀತಿ ಗಲಾಟೆ ಮಾಡಿಸುತ್ತಿದ್ದಾರೆ. ಇಂತಹ ಘಟನೆಗಳಿಗೆಲ್ಲ ನಾನು ಎದೆಗುಂದುವುದಿಲ್ಲ ಎಂದರು.

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement