ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ..!

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಶಾಸಕರುಗಳಿಗೆ ಸುದೀರ್ಘ ಪತ್ರ ಬರೆದಿದ್ದಾರೆ..!
ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್‍ಗೆ ಬೆಂಬಲ ನೀಡುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ, ಭಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಪ್ರಸ್ತುತ ರಾಜಕಾರಣದಲ್ಲಿ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಅವಕಾಶವನ್ನು ಇದೇ ಜೂನ್ 10ರಂದು ರಾಜ್ಯದಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆ ನಮಗೆ ನೀಡಿದೆ. ಕಾಂಗ್ರೆಸ್ ಕೋಮುವಾದದ ಜೊತೆ ಎಂದೂ ರಾಜಿಯಾಗದೆ ಜಾತ್ಯತೀತತೆ ಪರವಾಗಿ ಗಟ್ಟಿಯಾಗಿ ನಿಂತಿರುವ ಪಕ್ಷ. ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಲೆಕ್ಕಿಸದೆ ಜಾತ್ಯತೀತತೆ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ಜಾತ್ಯತೀತ ಜನತಾದಳದ ಹಿರಿಯ ನಾಯಕ ಹೆಚ್.ಡಿ.ದೇವೇಗೌಡರಿಗೆ ಪ್ರಧಾನಿಯಾಗುವ ಅವಕಾಶ ಎದುರಾದಾಗ ಕಾಂಗ್ರೆಸ್ ಪಕ್ಷ ಮುಕ್ತ ಹೃದಯದಿಂದ ಬೆಂಬಲಿಸಿತ್ತು. ಎರಡು ವರ್ಷಗಳ ಹಿಂದೆ ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಚುನಾವಣೆಯನ್ನು ಎದುರಿಸಿದಾಗ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಗೌಡರನ್ನು ಬೆಂಬಲಿಸಿ ಗೆಲ್ಲಿಸಿತ್ತು. ನಾಲ್ಕು ವರ್ಷಗಳ ಹಿಂದೆ ಕೇವಲ 37 ಶಾಸಕರನ್ನು ಹೊಂದಿದ್ದ ಜಾತ್ಯತೀತ ಜನತಾದಳಕ್ಕೆ ಕಾಂಗ್ರೆಸ್ ಬೆಂಬಲಿಸಿ ಎಚ್.ಡಿ.ಕುಮರಾಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿತ್ತು.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಇದು ನಮ್ಮ ಸೈದ್ದಾಂತಿಕ ಬದ್ಧತೆ. ಈ ಬಾರಿ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇದೇ ಸೈದ್ಧಾಂತಿಕ ಬದ್ಧತೆಯಿಂದ ಜಾತ್ಯತೀತ ಜನತಾದಳ ನಮ್ಮ ಎರಡನೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬಹುದು ಎಂಬ ನಿರೀಕ್ಷೆಯಿಂದ ನಮ್ಮ ಯುವನಾಯಕ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದೇವೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ.
ಮನ್ಸೂರು ಅಲಿಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ಧಾಂತಿಕ ಗೆಲುವಾಗುತ್ತದೆ. ಪ್ರಜಾಪ್ರತಿನಿಗಳಾದ ನಾವೆಲ್ಲರೂ ನಮ್ಮ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ಧವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ನನ್ನ ಸವಿನಯ ವಿನಂತಿ ಎಂದು ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement