ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ. ಶೀಘ್ರದಲ್ಲೇ ವಿಪಕ್ಷ ನಾಯಕನನ್ನು ಆಯ್ಕೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಪಕ್ಷ ನಾಯಕರು ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುವೆ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಪ್ರತಿನಿತ್ಯ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಅಭಿವೃದ್ದಿ ಕಾರ್ಯಗಳು ಕುಂಠಿತವಾಗಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬರಗಾಲದಿಂದಾಗಿ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ರೈತರ ಹಿತಾಸಕ್ತಿ ಕಡೆಗಣಿಸಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಮಾಡಿರುವ ಕೆಲಸಗಳಿಗೂ ಸಹ ಗುತ್ತಿಗೆದಾರರ ಬಳಿ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನವೇ ಇಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕಿಸಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಸೆಪ್ಟೆಂಬರ್ 8ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಸುಮಾರು 15-20 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ